ಬೆಂಗಳೂರು.18.ಜುಲೈ.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ನೀಡುವುದರ ಜೊತೆಗೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜುಲೈ 21ರಿಂದ ಗದಗ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಳ್ಳಲಾಗುವುದು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘ ತಿಳಿಸಿದೆ.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ರಾಜ್ಯ ಘಟಕದ ಅಧ್ಯಕ್ಷ ಹನಮಂತಗೌಡ ಆರ್. ಕಲ್ಮನಿ, ‘ವರ್ಷದ 12 ತಿಂಗಳ ವೇತನ ನೀಡಬೇಕು. ಪ್ರಸಕ್ತ ಶೈಕ್ಷಣಿಕ ಸಾಲಿಗೆ ನೇಮಕಾತಿ ಮಾಡಿಕೊಳ್ಳುವ ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ಕೈಬಿಡಬೇಕು. ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ನಿಯಮಗಳ ಪ್ರಕಾರ ಅರ್ಹತೆಯ ಮಾನದಂಡ ಪರಿಗಣಿಸಬೇಕು.
ಯುಜಿಸಿ ನಿಯಮಗಳಂತೆ ವೇತನ ನಿಗದಿಪಡಿಸಬೇಕು. 2024-25ನೇ ಶೈಕ್ಷಣಿಕ ಸಾಲಿನಲ್ಲಿ ಕಾರ್ಯನಿರ್ವಹಿಸಿದ ಅತಿಥಿ ಉಪನ್ಯಾಸಕರನ್ನು 2025-26ನೇ ಶೈಕ್ಷಣಿಕ ಸಾಲಿಗೆ ಮುಂದುವರಿಸಬೇಕು’ ಎಂದು ಆಗ್ರಹಿಸಿದರು.