Home » ಲೈವ್ ನ್ಯೂಸ್ » ಕರ್ನಾಟಕ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ 7.5% ಪ್ರತ್ಯೇಕ ಮೀಸಲಾತಿ!

ಕರ್ನಾಟಕ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ 7.5% ಪ್ರತ್ಯೇಕ ಮೀಸಲಾತಿ!

ಬೆಂಗಳೂರು.08.ಸೆಪ್ಟೆಂಬರ್.26: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಮಹತ್ವದ ಸಿಹಿಸುದ್ದಿ ನೀಡಿದೆ. ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಸರ್ಕಾರಿ ಕೋಟಾ ಸೀಟುಗಳ ಪ್ರವೇಶದಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೇ.7.5ರಷ್ಟು ಪ್ರತ್ಯೇಕ ಮೀಸಲಾತಿ ಕಲ್ಪಿಸಲು ಸರ್ಕಾರ ಮುಂದಾಗಿದೆ.

ಈ ಸಂಬಂಧ ಉನ್ನತ ಶಿಕ್ಷಣ ಇಲಾಖೆ ಸೋಮವಾರ, ಸೆಪ್ಟೆಂಬರ್‌ 7ರಂದು ಕರ್ನಾಟಕ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಪ್ರವೇಶಕ್ಕೆ ಅಭ್ಯರ್ಥಿಗಳ ಆಯ್ಕೆ (ತಿದ್ದುಪಡಿ) ನಿಯಮಗಳು, 2026 ರ ಕರಡು ಅಧಿಸೂಚನೆಯನ್ನು ಪ್ರಕಟಿಸಿದೆ. ಕರಡು ನಿಯಮಕ್ಕೆ ಸಾರ್ವಜನಿಕರಿಂದ ಸಲಹೆ ಮತ್ತು ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.

ಗ್ರಾಮೀಣ ಮೀಸಲಾತಿಯಲ್ಲಿ ಬದಲಾವಣೆ

ಇದುವರೆಗೆ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಸರ್ಕಾರಿ ಕೋಟಾ ಸೀಟುಗಳ ಪ್ರವೇಶದಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಒಟ್ಟಾರೆ ಶೇ.15ರಷ್ಟು ಮೀಸಲಾತಿ ಕಲ್ಪಿಸಲಾಗುತ್ತಿತ್ತು. ಹೊಸ ಪ್ರಸ್ತಾವಿತ ತಿದ್ದುಪಡಿಯಂತೆ ಈ ಶೇ.15ರ ಮೀಸಲಾತಿಯನ್ನು ಎರಡು ವಿಭಾಗಗಳಾಗಿ ವಿಂಗಡಿಸಲಾಗುತ್ತದೆ.

ಸರ್ಕಾರಿ ಶಾಲೆಗಳಲ್ಲಿ ಓದಿದ ಅರ್ಹ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.7.5 ಹಾಗೂ ಗ್ರಾಮೀಣ ಪ್ರದೇಶದಲ್ಲಿರುವ ಖಾಸಗಿ ಸೇರಿದಂತೆ ಯಾವುದೇ ಶಾಲೆ ಅಥವಾ ಶಿಕ್ಷಣ ಸಂಸ್ಥೆಯಲ್ಲಿ 10ನೇ ತರಗತಿವರೆಗೆ ವ್ಯಾಸಂಗ ಮಾಡಿದ ಅರ್ಹ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.7.5. ಹೀಗಾಗಿ ಗ್ರಾಮೀಣ ಮೀಸಲಾತಿಯ ಒಟ್ಟು ಪ್ರಮಾಣ ಶೇ.15ರಷ್ಟೇ ಮುಂದುವರಿಯಲಿದ್ದು, ಅದರಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಶೇ.7.5ರಷ್ಟು ಸೀಟುಗಳು ಲಭ್ಯವಾಗಲಿವೆ.

ಯಾರಿಗೆ ಸಿಗಲಿದೆ ಶೇ.7.5 ಮೀಸಲಾತಿ?

ಕರ್ನಾಟಕದ ಗ್ರಾಮೀಣ ಪ್ರದೇಶಗಳಲ್ಲಿ ಶಾಲಾ ಶಿಕ್ಷಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಸರ್ಕಾರಿ ಶಾಲೆಗಳು ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 1ರಿಂದ 10ನೇ ತರಗತಿವರೆಗೆ ವ್ಯಾಸಂಗ ಮಾಡಿರುವ ಅರ್ಹ ಗ್ರಾಮೀಣ ಅಭ್ಯರ್ಥಿಗಳಿಗೆ ಈ ಶೇ.7.5ರಷ್ಟು ಮೀಸಲಾತಿ ಅನ್ವಯವಾಗಲಿದೆ ಎಂದು ಕರಡು ನಿಯಮದಲ್ಲಿ ಪ್ರಸ್ತಾಪಿಸಲಾಗಿದೆ.ಇದರಿಂದ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ಆರಂಭದಿಂದಲೇ ಶಿಕ್ಷಣ ಪಡೆದಿರುವ ವಿದ್ಯಾರ್ಥಿಗಳಿಗೆ ವೃತ್ತಿಪರ ಶಿಕ್ಷಣಕ್ಕೆ ಪ್ರವೇಶ ಪಡೆಯುವ ಸಂದರ್ಭದಲ್ಲಿ ಪ್ರತ್ಯೇಕ ಅವಕಾಶ ದೊರೆಯಲಿದೆ.

ಇಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸ್‌ಗಳಿಗೆ ಅನ್ವಯ

ಇನ್ನೂ ಈ ಮೀಸಲಾತಿ ಕರ್ನಾಟಕದ ವೃತ್ತಿಪರ ಶಿಕ್ಷಣ ಸಂಸ್ಥೆಗಳಲ್ಲಿನ ಸರ್ಕಾರಿ ಕೋಟಾ ಸೀಟುಗಳ ಪ್ರವೇಶಕ್ಕೆ ಅನ್ವಯವಾಗಲಿದೆ. ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶದಲ್ಲಿ ಗ್ರಾಮೀಣ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಇದರ ಪ್ರಯೋಜನ ಸಿಗಲಿದೆ.

ಗ್ರಾಮೀಣ ಮತ್ತು ಬಡ ಕುಟುಂಬಗಳ ಮಕ್ಕಳು ನಗರ ಪ್ರದೇಶದ ವಿದ್ಯಾರ್ಥಿಗಳೊಂದಿಗೆ ಸ್ಪರ್ಧಿಸುವ ಸಂದರ್ಭದಲ್ಲಿ ಎದುರಿಸುವ ಹಲವು ಸವಾಲುಗಳನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ.

Karnataka government:15 ದಿನಗಳ ಕಾಲ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

ಸರ್ಕಾರ ಇದೀಗ ಕರಡು ನಿಯಮವನ್ನು ಪ್ರಕಟಿಸಿರುವುದರಿಂದ ಇದು ತಕ್ಷಣವೇ ಅಂತಿಮ ನಿಯಮವಾಗಿ ಜಾರಿಗೆ ಬಂದಿಲ್ಲ. ಅಧಿಸೂಚನೆ ಪ್ರಕಟವಾದ ದಿನಾಂಕದಿಂದ 15 ದಿನಗಳ ಒಳಗಾಗಿ ಸಾರ್ವಜನಿಕರು ಅಥವಾ ಬಾಧಿತ ವ್ಯಕ್ತಿಗಳು ತಮ್ಮ ಸಲಹೆ ಹಾಗೂ ಆಕ್ಷೇಪಣೆಗಳನ್ನು ಸಲ್ಲಿಸಬಹುದು.

ಆಕ್ಷೇಪಣೆಗಳನ್ನು ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿಗಳಿಗೆ, ಎಂ.ಎಸ್. ಬಿಲ್ಡಿಂಗ್‌, ಡಾ. ಬಿ.ಆರ್. ಅಂಬೇಡ್ಕರ್‌ ವೀಧಿ, ಬೆಂಗಳೂರು-560001 ವಿಳಾಸಕ್ಕೆ ಲಿಖಿತ ರೂಪದಲ್ಲಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಸ್ವೀಕರಿಸಲಾದ ಸಲಹೆ ಮತ್ತು ಆಕ್ಷೇಪಣೆಗಳನ್ನು ಪರಿಶೀಲಿಸಿದ ಬಳಿಕ ಸರ್ಕಾರ ನಿಯಮಗಳನ್ನು ಅಂತಿಮಗೊಳಿಸಲಿದೆ.

ಶಿವಕುಮಾರ್‌ ಘೋಷಣೆಯ ಬೆನ್ನಲ್ಲೇ ಕರಡು ನಿಯಮ

ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ನಡೆದ ಪ್ರಜಾಸೇವಾ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ನೆರವಾಗುವ ಉದ್ದೇಶದಿಂದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ.7.5ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಘೋಷಿಸಿದ್ದರು.

ಈ ಘೋಷಣೆಯ ಬೆನ್ನಲ್ಲೇ ಇದೀಗ ಉನ್ನತ ಶಿಕ್ಷಣ ಇಲಾಖೆ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಪ್ರವೇಶಕ್ಕೆ ಸಂಬಂಧಿಸಿದ ಕರಡು ನಿಯಮವನ್ನು ಪ್ರಕಟಿಸಿದೆ.

ಗ್ರಾಮೀಣ ವಿದ್ಯಾರ್ಥಿಗಳಿಗೆ ಏನು ಪ್ರಯೋಜನ?

ಸರ್ಕಾರದ ಈ ಪ್ರಸ್ತಾವನೆ ಜಾರಿಗೆ ಬಂದರೆ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ಓದಿದ ವಿದ್ಯಾರ್ಥಿಗಳಿಗೆ ಇಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸ್‌ಗಳ ಸರ್ಕಾರಿ ಕೋಟಾ ಸೀಟುಗಳಲ್ಲಿ ಪ್ರತ್ಯೇಕ ಅವಕಾಶ ದೊರೆಯಲಿದೆ.

ವಿಶೇಷವಾಗಿ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಅವಕಾಶ ವಿಸ್ತರಿಸುವುದು ಮತ್ತು ಸರ್ಕಾರಿ ಶಾಲೆಗಳಿಂದ ವೃತ್ತಿಪರ ಶಿಕ್ಷಣದತ್ತ ಸಾಗುವ ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಸುವುದು ಈ ಕ್ರಮದ ಪ್ರಮುಖ ಉದ್ದೇಶವಾಗಿದೆ.

Author

ಪ್ರಮುಖ ಸುದ್ದಿ

Stock market

Astrology