ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರು ನಕಲಿ ಪಿಹೆಚ್ ಡಿ ಪ್ರಮಾಣಪತ್ರಗಳನ್ನು ಸಲ್ಲಿಸಿ ನೇಮಕಾತಿ ಪಡೆದ ಆರೋಪ ಹಿನ್ನೆಲೆಯಲ್ಲಿ 249 ಅತಿಥಿ ಉಪನ್ಯಾಸಕರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಸೂಚನೆ ನೀಡಿದ್ದಾರೆ.
ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 249 ಅತಿಥಿ ಉಪನ್ಯಾಸಕರು ನಕಲಿ ಪಿಎಚ್‌ಡಿ ಪ್ರಮಾಣಪತ್ರಗಳನ್ನು ಸಲ್ಲಿಸಿ ನೇಮಕಾತಿ ಪಡೆದಿರುವ ಆರೋಪ ಕೇಳಿಬಂದಿದೆ.
ಈ ಹಿನ್ನೆಲೆಯಲ್ಲಿ ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರು ಸಂಬಂಧಪಟ್ಟ ಕಾಲೇಜುಗಳ ಪ್ರಾಂಶುಪಾಲರಿಗೆ ತಕ್ಷಣ ಕ್ರಿಮಿನಲ್ ಪ್ರಕರಣ ದಾಖಲಿಸಿ, ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ.
ಆಯುಕ್ತರು ಜುಲೈ 21ರಂದು ಈ ಕುರಿತು ಆದೇಶ ಹೊರಡಿಸಿದ್ದು, ನಕಲಿ ಪಿಎಚ್‌ಡಿ ಪ್ರಮಾಣಪತ್ರ ಸಲ್ಲಿಸಿದ ಅತಿಥಿ ಉಪನ್ಯಾಸಕರನ್ನು ತಕ್ಷಣ ಸೇವೆಯಿಂದ ಬಿಡುಗಡೆಗೊಳಿಸಿ, ಮುಂದಿನ ಯಾವುದೇ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸದಂತೆ ಬ್ಲ್ಯಾಕ್ ಲಿಸ್ಟ್ಗೆ ಸೇರಿಸಲು ನಿರ್ದೇಶನ ನೀಡಿದ್ದಾರೆ ಎನ್ನಲಾಗಿದೆ.
ಅತಿಥಿ ಉಪನ್ಯಾಸಕರ ನೇಮಕಾತಿ ವೇಳೆ ದಾಖಲೆಗಳನ್ನು ಪರಿಶೀಲಿಸಿ ನೇಮಕಾತಿ ಆದೇಶ ನೀಡಲಾಗುತ್ತದೆ. ಬಳಿಕ ಪ್ರಮಾಣಪತ್ರಗಳನ್ನು ದೃಢೀಕರಣಕ್ಕಾಗಿ ಸಂಬಂಧಿತ ವಿಶ್ವವಿದ್ಯಾಲಯಗಳಿಗೆ ಕಳುಹಿಸಲಾಗುತ್ತದೆ. ಈ ವೇಳೆ 249 ಅಭ್ಯರ್ಥಿಗಳ ಪಿಎಚ್‌ಡಿ ಪ್ರಮಾಣಪತ್ರಗಳು ಅಸಲಿಯಲ್ಲ ಎಂಬುದನ್ನು ವಿಶ್ವವಿದ್ಯಾಲಯಗಳು ದೃಢಪಡಿಸಿವೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಒಟ್ಟು 249 ನಕಲಿ ಪಿಎಚ್‌ಡಿ ಪ್ರಮಾಣಪತ್ರಗಳ ಪೈಕಿ 148 ಪ್ರಕರಣಗಳು ಕಲ್ಯಾಣ ಕರ್ನಾಟಕ ಭಾಗದಲ್ಲಿಯೇ ಪತ್ತೆಯಾಗಿವೆ. ಅದರಲ್ಲೂ ಕಲಬುರಗಿ ಜಿಲ್ಲೆಯಲ್ಲಿ 33 ಪ್ರಕರಣಗಳು ವರದಿಯಾಗಿವೆ.
ಜಿಲ್ಲಾವಾರು ವಿವರ
ಕಲಬುರಗಿ – 33
ಯಾದಗಿರಿ – 31
ಬೀದರ್ – 28
ರಾಯಚೂರು – 24
ಕೊಪ್ಪಳ – 13
ವಿಜಯನಗರ – 9
ಬಳ್ಳಾರಿ – 2
ಬೀದರ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 19, ಕಲಬುರಗಿಯ ಸೇಡಂ ರಸ್ತೆಯ ಸ್ವಾಯತ್ತ ಸರ್ಕಾರಿ ಕಾಲೇಜಿನಲ್ಲಿ 17 ಹಾಗೂ ಕಲಬುರಗಿ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 15 ಮಂದಿ ನಕಲಿ ಪಿಎಚ್‌ಡಿ ಪ್ರಮಾಣಪತ್ರ ಸಲ್ಲಿಸಿರುವುದು ಪತ್ತೆಯಾಗಿದೆ.
ಇದೇ ವೇಳೆ, ಕಲಬುರಗಿ, ಕೊಪ್ಪಳ, ವಿಜಯನಗರ ಹಾಗೂ ಬೀದರ್ ಜಿಲ್ಲೆಯ ಕೆಲವು ಕಾಲೇಜುಗಳ ಪ್ರಾಂಶುಪಾಲರು 8 ಅಭ್ಯರ್ಥಿಗಳ ಪ್ರಮಾಣಪತ್ರಗಳು ಅಸಲಿಯಾಗಿವೆ ಎಂದು ಟಿಪ್ಪಣಿ ಸೇರಿಸಿರುವ ಹಿನ್ನೆಲೆಯಲ್ಲಿ, ಆ ದಾಖಲೆಗಳನ್ನು ಮತ್ತೊಮ್ಮೆ ಪರಿಶೀಲಿಸುವಂತೆ ಇಲಾಖೆ ಸೂಚಿಸಿದೆ.






Any questions related to ನಕಲಿ PhD ಅತಿಥಿ ಉಪನ್ಯಾಸಕರ ವಿರುದ್ಧ ಕ್ರಿಮಿನಲ್ ಕೇಸ್ ಪ್ರಕ್ರಿಯ ಸೂಚನೆ?