01/07/2025 4:24 AM

Translate Language

Home » ಲೈವ್ ನ್ಯೂಸ್ » ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

Facebook
X
WhatsApp
Telegram


ಅನ್ನಭಾಗ್ಯ ಯೋಜನೆಯಡಿ ಸರ್ಕಾರವು ನಿಗದಿಪಡಿಸಿರುವ ಪ್ರಮಾಣದಂತೆ ಆಹಾರ ಸಾಮಾಗ್ರಿಗಳನ್ನು ವಿತರಿಸಿ – ರೆಡ್ಡಿ ಶ್ರೀನಿವಾಸ

ಕೊಪ್ಪಳ.30.ಜೂನ್.25:- ರಾಜ್ಯ ಸರ್ಕಾರದ ಮಹತ್ವಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲೊಂದಾದ ಅನ್ನಭಾಗ್ಯ ಯೋಜನೆಯಡಿ ಸರ್ಕಾರವು ನಿಗದಿಪಡಿಸಿರುವ ಪ್ರಮಾಣದಂತೆ ಆಹಾರ ಸಾಮಾಗ್ರಿಗಳನ್ನು ಫಲಾನುಭವಿಗಳಿಗೆ ವಿತರಣೆ ಮಾಡಬೇಕು ಎಂದು ಕೊಪ್ಪಳ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ ಹೇಳಿದರು.


ಅವರು ಸೋಮವಾರ ಕೊಪ್ಪಳ ಜಿಲ್ಲಾ ಪಂಚಾಯತ್‌ನ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಂಬಂಧ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.


ಜಿಲ್ಲೆಯ ಕೆಲ ನ್ಯಾಯಬೆಲೆ ಅಂಗಡಿಯವರು ಅನ್ನಭಾಗ್ಯ ಯೋಜನೆಯಡಿ ವಿತರಣೆ ಮಾಡುವ ಅಕ್ಕಿಯ ಪ್ರಮಾಣದಲ್ಲಿ ಕಡಿತ ಮಾಡುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. ಈ ಬಗ್ಗೆ ಸೂಕ್ತ ನಿರ್ದೇಶನ ನೀಡಿ, ಜಿಲ್ಲೆಯ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಅಕ್ಕಿ ವಿತರಣೆಯನ್ನು ಸರ್ಕಾರ ನಿಗದಿಪಡಿಸಿರುವಂತೆ ನೀಡಬೇಕು.

ಯಾವುದೇ ರೀತಿಯ ಕಡಿಮೆ ಪ್ರಮಾಣದಲ್ಲಿ ಅಕ್ಕಿ ವಿತರಣೆ ಮಾಡಿದರೆ, ಅಂತಹ ನ್ಯಾಯಾಬೆಲೆ ಅಂಗಡಿಗಳ ಪರವಾನಿಗೆ ರದ್ದುಪಡಿಸಲು ಕ್ರಮ ಕೈಗೊಳ್ಳಬೇಕು. ಇದರ ಜೊತೆಗೆ ಗ್ರಾಮೀಣ ಪ್ರದೇಶಗಳಲ್ಲಿ ಪಡಿತರ ವಿತರಿಸುವ ಸಮಯವನ್ನು ಹೆಚ್ಚಿಸಿ, ಜನರಿಗೆ ಅನುಕೂಲ ಮಾಡಿಕೊಡಬೇಕು. ಅಲ್ಲದೇ ಆಹಾರ ಸಾಮಾಗ್ರಿಗಳ ಗುಣಮಟ್ಟವನ್ನು ಪರಿಶೀಲಿಸಬೇಕು.

ವಿದ್ಯುತ್ ಬಿಲ್ ಬಾಕಿ ವಸೂಲಾತಿ ಸಂದರ್ಭದಲ್ಲಿ ಜೆಸ್ಕಾಂ ಅಧಿಕಾರಿ, ಸಿಬ್ಬಂದಿಗಳು ಜನರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಗೃಹಜ್ಯೋತಿ ಯೋಜನೆಯಡಿ ನೋಂದಣಿಯಾಗದಿರುವ ಅರ್ಜಿಗಳನ್ನು ಪರಿಶೀಲಿಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.


ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮೀ, ಗೃಹಜ್ಯೋತಿ, ಶಕ್ತಿ ಯೋಜನೆ, ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆಗಳ ಅನುಷ್ಠಾನದಲ್ಲಿ ಕೊಪ್ಪಳ ಜಿಲ್ಲೆಯು ಉತ್ತಮ ಪ್ರಗತಿ ಸಾಗಿಸುತ್ತಿದೆ. ಈ ಯೋಜನೆಗಳು ರಾಜ್ಯ ಸರ್ಕಾರದ ಮಹತ್ವಕಾಂಕ್ಷೆಯ ಸಾಮಾಜಿಕ ಕಾರ್ಯಕ್ರಮವಾಗಿದೆ. ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸಂಬಂಧಿಸಿದ ಅನುಷ್ಠಾನ ಇಲಾಖೆಗಳ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಿ, ಯಾವುದೇ ಅರ್ಹ ಫಲಾನುಭವಿಗಳು ಹೊರಗುಳಿಯದಂತೆ ನೋಡಿಕೊಳ್ಳಬೇಕು.

ಸಮಾಜದ ಕಟ್ಟಕಡೆ ವ್ಯಕ್ತಿಗೂ ಆರ್ಥಿಕ ಸಬಲೀಕರಣಕ್ಕೆ ತುಂಬಾ ಸಹಕಾರಿಯಾಗಿರುವ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ರೀತಿಯ ದೂರು, ಸಮಸ್ಯೆಗಳಿದ್ದರೆ, ಅವುಗಳಿಗೆ ಅಧಿಕಾರಿಗಳು ತಕ್ಷಣವೇ ಸ್ಪಂದಿಸಿ ಜನರಿಗೆ ಅನುಕೂಲ ಮಾಡಿಕೊಡಬೇಕು. ಜಿಲ್ಲೆಯ ಪ್ರತಿ ಅರ್ಹ ಫಲಾನುಭವಿಗೆ ಸೌಲಭ್ಯ ದೊರಕುವಂತೆ ಅನುಷ್ಠಾನಾಧಿಕಾರಿಗಳು ಶ್ರಮಿಸಬೇಕು ಎಂದು ಹೇಳಿದರು.


ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಅವರು ಮಾತನಾಡಿ, ಬಡ ಜನರ, ಅಂಗನವಾಡಿ, ಶಾಲೆ ಮತ್ತು ಕುಡಿಯುವ ನೀರಿಗೆ ಸಂಬಂಧಿಸಿದ ವಿದ್ಯುತ್ ಬಿಲ್ ಬಾಕಿಯಿದ್ದರೆ, ನೇರವಾಗಿ ವಿದ್ಯುತ್ ಕಡಿತಗೊಳಿಸುವಂತಹ ಕಾರ್ಯಕ್ಕೆ ಹೋಗಬಾರದು. ವಿದ್ಯುತ್ ಬಿಲ್ ಪಾವತಿಸುವಂತೆ ಸಂಬAಧಪಟ್ಟವರಿಗೆ ಸಮಾಧಾನದಿಂದ ತಿಳಿಸಬೇಕು. ಯುವನಿಧಿ ಯೋಜನೆಯಡಿ ಜಿಲ್ಲೆಯ ಪ್ರಗತಿ ವಿವರದೊಂದಿಗೆ ನೋಂದಣಿಯಡಿ ಬಾಕಿ ಇರುವ ಅರ್ಜಿಗಳ ಸಂಖ್ಯೆ, ಸ್ಥಿತಿ-ಗತಿ ಹಾಗೂ ಇತರ ಅಗತ್ಯ ಮಾಹಿತಿ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.


*ಐದು ಗ್ಯಾರಂಟಿ ಯೋಜನೆಗಳ ಪ್ರಗತಿ:* ಗೃಹಲಕ್ಷ್ಮೀ ಯೋಜನೆಯಡಿ ಕೊಪ್ಪಳ ಜಿಲ್ಲೆಯ 3,26,394 ಫಲಾನುಭವಿಗಳಿಗೆ ಮೇ-2025ರ ಅಂತ್ಯದವರೆಗೆ ಡಿಬಿಟಿ ಮೂಲಕ 1203,88,38,000 ರೂ.ಗಳನ್ನು ಪಾವತಿಸಲಾಗಿದೆ.


ಗೃಹಜ್ಯೋತಿ ಯೋಜನೆಯಡಿ ಮೇ-2025ರ ಅಂತ್ಯದವರೆಗೆ 2,76,612 ಗ್ರಾಹಕರಿಗೆ ಉಚಿತ ವಿದ್ಯುತ್ ಸೌಲಭ್ಯ ದೊರೆತಿದ್ದು, ಇದಕ್ಕಾಗಿ 252.65 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ.
ಕೊಪ್ಪಳ ಜಿಲ್ಲೆಯಲ್ಲಿ 37,249 ಅಂತ್ಯೋದಯ (ಎಎವೈ), 2,91,351 ಪಿ.ಹೆಚ್.ಹೆಚ್ (ಬಿಪಿಎಲ್) ಕಾರ್ಡ್ಗಳಿದ್ದು, ಅನ್ನಭಾಗ್ಯ ಯೋಜನೆಯಡಿ ಹಣದ ಬದಲಾಗಿ 2025ರ ಫೆಬ್ರವರಿ ಮಾಹೆಯಿಂದ ಇಲ್ಲಿಯವರೆಗೂ ಹೆಚ್ಚುವರಿ 5 ಕೆ.ಜಿ ಅಕ್ಕಿಯನ್ನು ವಿತರಿಸಲಾಗುತ್ತಿದೆ. ಇದರ ಜೊತೆಗೆ ಎಎವೈ ಮತ್ತು ಪಿ.ಹೆಚ್.ಹೆಚ್ (ಎನ್.ಎಫ್.ಎಸ್.ಎ ಸೆಂಟ್ರಲ್) ಕಾರ್ಡುಗಳಿಗೆ ಈ ಬಾರಿ ಜೋಳವನ್ನು ಸಹ ವಿತರಣೆ ಮಾಲಾಗುತ್ತಿದೆ.


ಶಕ್ತಿ ಯೋಜನೆಯಡಿ 2025ರ ಮೇ ಮಾಹೆಯಲ್ಲಿ 34,77,996 ಮಹಿಳೆಯರು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದು, ಇದಕ್ಕಾಗಿ 15,04,44,105 ರೂ.ಗಳ ಖರ್ಚಾಗಿದೆ.


ಯುವನಿಧಿ ಯೋಜನೆಯಡಿ ಮೇ-2025ರಲ್ಲಿ 6,455 ಫಲಾನುಭವಿಗಳು ನೋಂದಣಿಯಾಗಿದ್ದು, ಒಟ್ಟು ಮೊತ್ತ ರೂ. 15.17 ಕೋಟಿಗಳನ್ನು ಪಾವತಿಸಲಾಗಿರುತ್ತದೆ ಎಂದು ಸಂಬAಧಿಸಿದ ಇಲಾಖೆಗಳ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.


ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಎಸ್.ಬಿ.ಖಾದ್ರಿ, ಮಂಜುನಾಥ ಗೊಂಡಬಾಳ ಮತ್ತು ಅಮರೇಶಪ್ಪ ಎಸ್.ಜಿ., ಗ್ಯಾರಂಟಿ ಯೋಜನೆಗಳ ನೋಡಲ್ ಅಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಸೇರಿದಂತೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯರು ಹಾಗೂ ಜಿಲ್ಲೆಯ ವಿವಿಧ ತಾಲ್ಲೂಕುಗಳ ಅಧ್ಯಕ್ಷರು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಹಲವು ವಿಷಯಗಳ ಕುರಿತು ತಮ್ಮ ಸಲಹೆ ಸೂಚನೆಗಳನ್ನು ನೀಡಿದರು.


ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿಷಯ ನಿರ್ವಾಹಕರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!