ಅಲ್ಪಸಂಖ್ಯಾತರ ಯೋಜನೆಗಳ ಅನುಷ್ಠಾನಕ್ಕೂ ಒತ್ತು ನೀಡಿ- ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ
ಕೊಪ್ಪಳ.13.ಆಗಸ್ಟ್.25: ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ ಇಲಾಖೆಗಳು ಅಲ್ಪಸಂಖ್ಯಾತರ ಯೋಜನೆಗಳ ಅನುಷ್ಠಾನಕ್ಕೂ ಒತ್ತು ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ಸುರೇಶ್ ಬಿ. ಇಟ್ನಾಳ ಹೇಳಿದರು.
ಅವರು ಬುಧವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಹಮ್ಮಿಕೊಂಡಿದ್ದ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಅಲ್ಪಸಂಖ್ಯಾತರ ಸಮುದಾಯದವರನ್ನು ಮುಖ್ಯವಾಹಿನಿಗೆ ತರಲು ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಅಲ್ಪಸಂಖ್ಯಾತ ಸಮುದಾಯಗಳಾದ ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಸಿಖ್ ಪಾರ್ಸಿ ಬೌದ್ಧ ಸಮುದಾಯಗಳಗಳಿಗೆ ಇಲಾಖಾವಾರು ವಿವಿಧ ಯೋಜನೆಗಳಡಿಯಲ್ಲಿ ನಿಗದಿಪಡಿಸಿದ ಗುರಿಗಳಂತೆ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ತಲುಪಿಸಬೇಕು.
ವಿದ್ಯಾರ್ಥಿಗಳಿಗೆ ಅರಿವು ಯೋಜನೆ ಹಾಗೂ ಆರ್ಥಿಕವಾಗಿ ಸಬಲಿಕರಣಗೊಳಿಸಲು ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಒದಗಿಸವ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿ ವೇತನ, ಉಚಿತ ಪರೀಕ್ಷಾ ಪೂರ್ವ ತರಬೇತಿಗಳನ್ನು ನೀಡಲಾಗುತ್ತಿದ್ದು, ಇದರ ಸದುಪಯೋಗ ಅಲ್ಪಸಂಖ್ಯಾತರ ಸಮುದಾಯದ ಅರ್ಹ ಫಲಾನುಭವಿಗಳಿಗೆ ಸಿಗುವಂತಾಗಬೇಕು.
ಈ ಹಿನ್ನೆಲೆಯಲ್ಲಿ ಯೋಜನೆಗಳು ಮತ್ತು ಕಾರ್ಯಕ್ರಮಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲು ಕ್ರಮ ವಹಿಸುವಂತೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳಿಗೆ ಸೂಚನೆ ನೀಡಿದರು.
ವಿವಿಧ ಇಲಾಖೆಗಳ ಮೂಲಕವು ಅಲ್ಪಸಂಖ್ಯಾತರಿಗಾಗಿಯೇ ಮೀಸಲಿಟ್ಟ ಅನುದಾನವನ್ನು ಸಹ ಅರ್ಹರಿಗೆ ತಲುಪಿಸಲು ಆಯಾ ಇಲಾಖೆಗಳ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು. ನಿವೇಶನ, ಮನೆಗಳ ಹಂಚಿಕೆ, ಸ್ವಯಂ ಉದ್ಯೋಗ ಯೋಜನೆ, ಗಂಗಾ ಕಲ್ಯಾಣ ಹಾಗೂ ವಿವಿಧ ಇಲಾಖೆಯ ಯೋಜನೆಗಳ ಬಗ್ಗೆ ಅರಿವು ಮೂಡಿಸಲು ಪ್ರಚಾರ ಕಾರ್ಯಕ್ರಮ ಕೈಗೊಂಡು ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ ಅರ್ಹ ಅಲ್ಪಸಂಖ್ಯಾತರ ಫಲಾನುಭವಿಗಳಿಗೆ ಸೂಕ್ತ ಸೌಲಭ್ಯ ಒದಗಿಸಲು ಕ್ರಮವಹಿಸುವಂತೆ ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿಯ ನಾಮ ನಿರ್ದೇಶಿತ ಸದಸ್ಯರಾದ ನಜೀರಸಾಬ್ ಮೂಲಿಮನಿ, ಮೆಹಬೂಬ್ ಪಾಷಾ ಮಾನ್ವಿ, ಎಂ.ಡಿ ಸಿರಾಜ್ ಸಿದ್ದಾಪುರ ಅವರು ಯೋಜನೆಗಳ ಅನುಷ್ಠಾನದ ಕುರಿತಂತೆ ವಿವಿಧ ವಿಷಯಗಳನ್ನು ಸಭೆಯಲ್ಲಿ ಪ್ರಸ್ತಾಪಿಸಿದರು ಮತ್ತು ಸಲಹೆಗಳನ್ನು ನೀಡಿದರು.
ಈ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಂಜುನಾಥ ಗುಂಡೂರ್, ಜಂಟಿ ಕೃಷಿ ನಿರ್ದೇಶಕ ಟಿ.ಎಸ್. ರುದ್ರೇಶಪ್ಪ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅಜ್ಮೀರ್ ಅಲಿ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಕೃಷ್ಣ ಸಿ. ಉಕ್ಕುಂದ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪರಶುರಾಮ ಶೆಟ್ಟೆಪ್ಪನವರ್, ಪಶು ಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕ ಡಾ. ಪಿ.ಎಂ.ಮಲ್ಲಯ್ಯ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ತಾಲ್ಲೂಕು ವಿಸ್ತರಣಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.