ಬೀದರ್‌| ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲ ಬಗೆಹರಿಸಲು ಆಗ್ರಹ

ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ವಿದ್ಯಾರ್ಥಿಗಳು ಎದುರಿಸುತ್ತಿರುವ  ಗೊಂದಲವನ್ನು ಬಗೆಹರಿಸುವಂತೆ ಆಗ್ರಹಿಸಿ ಎಐಡಿಎಸ್‌ಒ ನೇತೃತ್ವದಲ್ಲಿ ವಿದ್ಯಾರ್ಥಿಗಳು ನಗರದ ಡಾ.ಬಿ.ಆರ್‌. ಅಂಬೇಡ್ಕರ್‌ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಸಂಘಟನೆಯ ಬೀದರ್‌ ಜಿಲ್ಲಾ ಸಂಚಾಲಕ ವೆಂಕಟೇಶ ದೇವದುರ್ಗ ಮಾತನಾಡಿ, ರಾಜ್ಯದಾದ್ಯಂತ ಪದವಿ ತರಗತಿಗಳು ಪ್ರಾರಂಭವಾಗಿ ತಿಂಗಳುಗಳೇ ಕಳೆದಿವೆ. ಆದರೆ, ಇದುವರೆಗೂ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಿಲ್ಲದೆ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿವೆ. ಇದುವರೆಗೆ ನೇಮಕಾತಿ ನಡೆಯದ ಕಾರಣ ತರಗತಿಗಳು ಸರಿಯಾಗಿ ನಡೆಯುತ್ತಿಲ್ಲ ಎಂದು ದೂರಿದರು.

ತರಗತಿ ನಡೆಯದೇ ವಿದ್ಯಾರ್ಥಿಗಳು ತೊಂದರೆಗೆ ಸಿಲುಕಿದ್ದಾರೆ. ಅವರ ಶೈಕ್ಷಣಿಕ ಭವಿಷ್ಯ ಅತಂತ್ರವಾಗಿದೆ. ಮುಂದಿನ ತಿಂಗಳು ಪದವಿ ವಿದ್ಯಾರ್ಥಿಗಳ ಮೊದಲ ಆಂತರಿಕ ಪರೀಕ್ಷೆಗಳು ನಡೆಯಬೇಕಿದೆ. ಪಾಠಗಳು ಇನ್ನೂ ಆರಂಭವಾಗಿಲ್ಲ. ಸರ್ಕಾರದ ಧೋರಣೆ ಸರಿಯಲ್ಲ ಎಂದು ಟೀಕಿಸಿದರು.

ಯುಜಿಸಿಯ ಹೊಸ ನಿರ್ದೇಶನ ಹಾಗೂ ನ್ಯಾಯಾಲಯದಲ್ಲಿ ಮೊಕದ್ದಮೆ ನಡೆಯುತ್ತಿರುವುದರಿಂದ ಅತಿಥಿ ಉಪನ್ಯಾಸಕರ ನೇಮಕಾತಿ ನನೆಗುದಿಗೆ ಬಿದ್ದಿದೆ. ಶೈಕ್ಷಣಿಕ ವಿಷಯದಲ್ಲಿ ರಾಜ್ಯ ಸರ್ಕಾರವು ಕೇಂದ್ರದ ನಿರ್ಧಾರಗಳನ್ನು ಪಾಲಿಸವುದು ಕಡ್ಡಾಯವಲ್ಲ ಎಂದು ಸುಪ್ರೀಂಕೋರ್ಟ್‌ ಹೇಳಿದೆ. ಆದಕಾರಣ ರಾಜ್ಯ ಸರ್ಕಾರವು ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗೆ ಪೂರಕವಾದ ಸ್ಪಷ್ಟ ನಿಲುವು ತಾಳಬೇಕು. ಇಂತಹ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರವು ಸೂಕ್ತವಾದ ತುರ್ತು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

Similar Posts

Leave a Reply

Your email address will not be published. Required fields are marked *