ಬೀದರ.20.ಜುಲೈ.25:- ಇತ್ತೀಚೆಗೆ ಬೀದರ ಬ್ರಿಮ್ಸ್ (BRIMS) ಆಸ್ಪತ್ರೆಯಲ್ಲಿ ವಿದ್ಯುತ್ ವ್ಯತ್ಯಯದಿಂದ ರೋಗಿಗಳಿಗೆ ತೊಂದರೆ ಉಂಟಾದ ಹಿನ್ನೆಲೆಯಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಇಂದು ಬ್ರಿಮ್ಸ್ ಆಸ್ಪತ್ರೆಗೆ ಧಿಡೀರ್ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು.
ಸಚಿವರು ನೇರವಾಗಿ ಆಸ್ಪತ್ರೆಯ ರೋಗಿಗಳೊಂದಿಗೆ ಸಂವಾದ ನಡೆಸಿ, ಅವರಿಗೆ ನೀಡಲಾಗುತ್ತಿರುವ ಚಿಕಿತ್ಸೆ, ಸೌಲಭ್ಯಗಳು ಹಾಗೂ ವೈದ್ಯರು ಹಾಗೂ ಸಿಬ್ಬಂದಿಯಿಂದ ಆಸ್ಪತ್ರೆಯೊಳಗಿನ ಸಮಸ್ಯೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡರು.

ಬ್ರಿಮ್ಸ್‍ನಲ್ಲಿ ಸಂಭವಿಸಿದ ವಿದ್ಯುತ್ ವ್ಯತ್ಯಯದ ಕುರಿತು ಅವರು ಗಂಭೀರವಾಗಿ ಗಮನ ಹರಿಸಿದ್ದು, ಈ ಘಟನೆ ನಿರ್ಲಕ್ಷ್ಯದಿಂದ ಉಂಟಾಗಿದ್ದರೆ, ಅದನ್ನು ಯಾವುದೇ ಕಾರಣಕ್ಕೂ ಕ್ಷಮಿಸಲಾಗದು ಎಂದು ತಿಳಿಸಿದ್ದಾರೆ. ಈ ಕುರಿತು ತಕ್ಷಣ ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಿದ್ದಾರೆ. ವರದಿ ಬಂದ ತಕ್ಷಣ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಅವರು ಎಚ್ಚರಿಸಿದರು.
ಆಸ್ಪತ್ರೆಯಲ್ಲಿ ಯಾವುದೇ ರೀತಿಯ ಅಸೌಕರ್ಯವಾಗದಂತೆ ಕ್ರಮ ಕೈಗೊಳ್ಳುತ್ತೇವೆ. ಜನತೆಗೆ ಉತ್ತಮ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದರು.
ಈ ಸಂದರ್ಭದಲ್ಲಿ ಪೌರಾಡಳಿತ ಸಚಿವರಾದ ರಹೀಂ ಖಾನ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ, ಬ್ರಿಮ್ಸ್ ನಿರ್ದೇಶಕ ಶಿವಕುಮಾರ ಶೆಟಕಾರ, ವೈದ್ಯಾಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.