ಹೆಚ್ಚಿನ ಸಂಖ್ಯೆಯಲ್ಲಿ ಪಿಯು ಕಾಲೇಜು ಆರಂಭಿಸುವ ಚಿಂತನೆ : ಮಧು ಬಂಗಾರಪ್ಪ
ಬೆಂಗಳೂರು.14.ಸೆಪ್ಟೆಂಬರ್.25:- ರಾಜ್ಯ ಸರ್ಕಾರ ಈ ಬಾರಿ ಮತ್ತಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಪಿಯು ಕಾಲೇಜು ಆರಂಭಿಸುವ ಚಿಂತನೆ ಇದೆ’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಶನಿವಾರ ತಿಳಿಸಿದರು.
ಇಲ್ಲಿನ ಬಿಐಇಟಿ ಕಾಲೇಜು ಆವರಣದಲ್ಲಿ ಕರ್ನಾಟಕ ಅನುದಾನ ರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘ (ಕುಪ್ಮಾ) ದಿಂದ ನಡೆದ ರಾಜ್ಯಮಟ್ಟದ ಪದವಿಪೂರ್ವ ಶಿಕ್ಷಣ ಸಮಾವೇಶದ 2ನೇ ದಿನದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
‘ರಾಜ್ಯದಲ್ಲಿ 800 ಕೆಪಿಎಸ್ ಶಾಲೆ ಆರಂಭಿಸಲು ₹3,500 ಕೋಟಿ ಅನುದಾನ ನೀಡಲಾಗುತ್ತಿದೆ. 25ಕ್ಕಿಂತ ಕಡಿಮೆ ವಿದ್ಯಾರ್ಥಿಗಳಿರುವ 13 ಸಾವಿರ ಶಾಲೆಗಳು ರಾಜ್ಯದಲ್ಲಿವೆ’ ಎಂದು ತಿಳಿಸಿದರು.
‘ಶಿಕ್ಷಣ ಕ್ಷೇತ್ರದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ಕೊಡುಗೆಯನ್ನು ಕಡೆಗಣಿಸುವಂತಿಲ್ಲ. ನಿಮ್ಮ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಬದ್ಧ’ ಎಂದು ಭರವಸೆ ನೀಡಿದರು.
ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅಧ್ಯಕ್ಷತೆ ವಹಿಸಿದ್ದರು. ಕುಪ್ಮಾ ಅಧ್ಯಕ್ಷ ಎಂ.ಮೋಹನ್ ಆಳ್ವಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ, ಗೌರವಾಧ್ಯಕ್ಷ ಎಂ.ಬಿ. ಪುರಾಣಿಕ್, ಕಾರ್ಯದರ್ಶಿ ನರೇಂದ್ರ ಎಲ್. ನಾಯಕ್, ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಜಿ. ಶ್ರೀಧರ್ ವೇದಿಕೆಯಲ್ಲಿದ್ದರು.
ಎರಡು ದಿನಗಳ ಸಮಾವೇಶದಲ್ಲಿ ರಾಜ್ಯದ ವಿವಿಧ ಪಿಯು ಕಾಲೇಜುಗಳ ಪ್ರಾಂಶುಪಾಲರು, ಆಡಳಿತ ಮಂಡಳಿ ಸದಸ್ಯರು ಸೇರಿ ನೂರಾರು ಜನ ಭಾಗವಹಿಸಿದ್ದರು.
ಸಂಘಟನೆ ಬಲಪಡಿಸುವುದು, ಗುಣಮಟ್ಟದ ಶಿಕ್ಷಣ, ಖಾಸಗಿ ಕಾಲೇಜುಗಳ ಎದುರು ಇರುವ ಸವಾಲುಗಳು, ತಂತ್ರಜ್ಞಾನ ಮತ್ತು ಎಐ ಬಳಕೆ ಬಗ್ಗೆ ಸಮಾವೇಶದಲ್ಲಿ ಚರ್ಚೆ ನಡೆಸಲಾಯಿತು.

