ಕೊಪ್ಪಳ.05.ಸೆಪ್ಟೆಂಬರ್.26: ಕೊಪ್ಪಳಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಪ್ಪಳ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಗಂಗಾವತಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ, ಮುಸಲಾಪೂರ ಇವರ ಸಂಯುಕ್ತಾಶ್ರಯದಲ್ಲಿ ಸೆಪ್ಟೆಂಬರ್ 3ರಂದು ಮುಸಲಾಪೂರ ಪ್ರಾಥಮಿಕ ಆರೋಗ್ಯ ಕೇಂದ್ರದ ಆಸ್ಪತ್ರೆ ಆವರಣದಲ್ಲಿ ರಾಷ್ಟ್ರೀಯ ಪೌಷ್ಠಿಕ ಆಹಾರ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಯಿತು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ದೇವಮ್ಮ ಅವರು ಮಾತನಾಡಿ, ಪ್ರತಿವರ್ಷ ಸೆಪ್ಟೆಂಬರ್ 1ರಿಂದ 7ರವರೆಗೆ ರಾಷ್ಟ್ರೀಯ ಪೌಷ್ಠಿಕ ಆಹಾರ ಸಪ್ತಾಹ ಆಚರಿಸಲಾಗುತ್ತದೆ. ಗರ್ಭಿಣಿಯರು, ಬಾಣಂತಿಯರು, ಹಾಲುಣಿಸುವ ತಾಯಂದಿರು, ಹದಿಹರೆಯದವರು ಹಾಗೂ ಐದು ವರ್ಷದೊಳಗಿನ ಮಕ್ಕಳಲ್ಲಿ ರಕ್ತಹೀನತೆ ಮತ್ತು ಪೌಷ್ಠಿಕಾಂಶದ ಕೊರತೆ ತಡೆಗಟ್ಟುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.
ಸ್ಥಳೀಯವಾಗಿ ಲಭ್ಯವಿರುವ ಪೌಷ್ಠಿಕ ಆಹಾರ ಪದಾರ್ಥಗಳನ್ನು ದಿನನಿತ್ಯದ ಆಹಾರದಲ್ಲಿ ಬಳಸಬೇಕು. ಹಸಿರು ಸೊಪ್ಪು, ತರಕಾರಿ, ಮೊಳಕೆ ಕಾಳು, ಹಾಲು ಹಾಗೂ ಹಾಲಿನ ಉತ್ಪನ್ನಗಳನ್ನು ನಿಯಮಿತವಾಗಿ ಸೇವಿಸಬೇಕು. ಆಹಾರದಲ್ಲಿ ಕಾರ್ಬೋಹೈಡ್ರೇಟ್, ಪ್ರೋಟೀನ್, ಕೊಬ್ಬು, ವಿಟಾಮಿನ್‌ಗಳು ಹಾಗೂ ಖನಿಜಾಂಶಗಳು ಸಮತೋಲನವಾಗಿ ದೊರೆಯುವಂತೆ ವಿವಿಧ ಆಹಾರ ಪದಾರ್ಥಗಳನ್ನು ಬಳಸಬೇಕು ಎಂದು ಅವರು ಸಲಹೆ ನೀಡಿದರು.
ಕಾಲೋಚಿತ ಹಣ್ಣುಗಳನ್ನು ಸೇವಿಸುವುದರ ಜೊತೆಗೆ ಪ್ರತಿದಿನ ಆಯೋಡಿನ್‌ಯುಕ್ತ ಉಪ್ಪನ್ನು ಬಳಸಬೇಕು. ಶಿಶುಗಳಿಗೆ ಆರು ತಿಂಗಳವರೆಗೆ ತಾಯಿಯ ಎದೆಹಾಲು ಮಾತ್ರ ನೀಡಬೇಕು.
ಆರು ತಿಂಗಳ ನಂತರ ಎದೆಹಾಲಿನೊಂದಿಗೆ ಪೂರಕ ಪೌಷ್ಠಿಕ ಆಹಾರ ನೀಡಬೇಕು. ಮಕ್ಕಳ ಬೆಳವಣಿಗೆಯನ್ನು ವಯಸ್ಸಿಗೆ ಅನುಗುಣವಾಗಿ ನಿಯಮಿತವಾಗಿ ಗಮನಿಸಬೇಕು ಎಂದು ಹೇಳಿದರು. ಹದಿಹರೆಯದ ಮಕ್ಕಳಲ್ಲಿ ಪೌಷ್ಠಿಕಾಂಶ ಹೆಚ್ಚಿಸಲು ಪ್ರತಿ ಸೋಮವಾರ ಕಬ್ಬಿಣಾಂಶದ ಮಾತ್ರೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶಿವಕುಮಾರ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಯಾಸ್ಮಿನ್, ಅಂಗನವಾಡಿ ಕಾರ್ಯಕರ್ತೆಯರಾದ ಯಂಕಮ್ಮ, ಈರಮ್ಮ, ಮಂಜಮ್ಮ ಸೇರಿದಂತೆ ಗರ್ಭಿಣಿಯರು, ಬಾಣಂತಿಯರು, ತಾಯಂದಿರು ಹಾಗೂ ಹಿರಿಯ ನಾಗರಿಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.





Any questions related to ಮುಸಲಾಪೂರ: ರಾಷ್ಟ್ರೀಯ ಪೌಷ್ಠಿಕ ಆಹಾರ ಸಪ್ತಾಹದ ಜಾಗೃತಿ ಕಾರ್ಯಕ್ರಮ?