ಬೆಂಗಳೂರು.14.ಆಗಸ್ಟ್.25:- ವಿಧಾನಪರಿಷತ್ : ರಾಜ್ಯದಲ್ಲಿ ಖಾಲಿಯಿರುವ ವಿಶ್ವವಿದ್ಯಾಲಯಗಳು ಮತ್ತು ಸರ್ಕಾರಿ ಪದವಿ ಕಾಲೇಜುಗಳಿಗೆ ಪ್ರಾಧ್ಯಾಪಕರ ನೇಮಕಾತಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಆಶ್ವಾಸನೆ ನೀಡಿದ್ದಾರೆ.
ಶೂನ್ಯ ವೇಳೆಯಲ್ಲಿ ಬಿಜೆಪಿ ಸದಸ್ಯ ಬಿ.ಜಿ. ಪಾಟೀಲ್ ಅವರ ಪ್ರಸ್ತಾಪಕ್ಕೆ ಉತ್ತರಿಸಿದ ಸಚಿವರು, ರಾಜ್ಯದ ಹಲವು ವಿಶ್ವವಿದ್ಯಾಲಯಗಳಿಗೆ ಪ್ರಾಧ್ಯಾಪಕರ ನೇಮಕಾತಿಗೆ ಸಂಬಂಧಿಸಿದಂತೆ ಸಂಪುಟ ಉಪ ಸಮಿತಿಯನ್ನು ರಚಿಸಲಾಗಿದ್ದು ವರದಿ ನಿರೀಕ್ಷಿಸಲಾಗುತ್ತದೆ. ಅತಿ ಶೀಘ್ರದಲ್ಲೇ ಪ್ರಾಧ್ಯಾಪಕರ ನೇಮಕಾತಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಪುನರುಚ್ಚರಿಸಿದರು.
ಮೈಸೂರು ವಿಶ್ವವಿದ್ಯಾಲಯದಲ್ಲಿ ಹಲವು ಕೋರ್ಸ್‌ಗಳಿಗೆ ವಿದ್ಯಾರ್ಥಿಗಳು ಮತ್ತು ಕೆಲ ಕೋರ್ಸ್‌ಗಳಿಗೆ ಅಧ್ಯಾಪಕರ ಕೊರತೆಯಿರುವುದು ತಮ್ಮ ಗಮನಕ್ಕೆ ಬಂದಿದೆ. ಕನಿಷ್ಠ ಹತ್ತು ವಿದ್ಯಾರ್ಥಿಗಳಿದ್ದರೆ ಮಾತ್ರ ಕೋರ್ಸ್ ಮುಂದುವರಿಸಬೇಕು ಇಲ್ಲವಾದಲ್ಲಿ ಮುಚ್ಚಬೇಕೆಂಬ ನಿಯಮ ಎಲ್ಲಾ ವಿಶ್ವವಿದ್ಯಾಲಯಗಳಿಗೂ ಅನ್ವಯವಾಗುತ್ತದೆ. ಇನ್ನು ಮೈಸೂರು ವಿವಿಯ ಸಮಸ್ಯೆ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.
