ಬೀದರ್.03.ಫೆಬ್ರವರಿ.26: ಇಂದು ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು ಬಿ. ಚವ್ಹಾಣ ಅವರು ಫೆ.1 ರಂದು ಔರಾದ(ಬಿ) ವಿಧಾನಸಭಾ ಕ್ಷೇತ್ರದ ಖೇರ್ಡಾ, ಭಂಡಾರಕುಮಟಾ, ಡೊಂಗರಗಾಂವ, ಕರಕ್ಯಾಳ, ಹುಲ್ಯಾಳ, ಏಕಂಬಾ, ಗಣೇಶಪೂರ(ಎ), ಜಮಾಲಪೂರ, ಖಂಡಿಕೇರಿ ಹಾಗೂ ಹಸ್ಸಿಖೇರಾದಲ್ಲಿ ಗ್ರಾಮ ಸಂಚಾರ ನಡೆಸಿದರು.
ಗ್ರಾಮಸ್ಥರ ಅಹವಾಲುಗಳನ್ನು ಆಲಿಸಿದ ಅವರು, ಅತೀವೃಷ್ಟಿಯಿಂದ ಉಂಟಾಗಿರುವ ಬೆಳೆ ಹಾನಿ ಪರಿಹಾರ ವಿತರಣೆಯಲ್ಲಿ ತಾರತಮ್ಯ ನಡೆಯುತ್ತಿರುವ ಬಗ್ಗೆ ಹಲವು ದೂರುಗಳು ಬರುತ್ತಿವೆ. ತಕ್ಷಣವೇ ಈ ಸಮಸ್ಯೆಗಳನ್ನು ಸರಿಪಡಿಸಿ ರೈತರಿಗೆ ನ್ಯಾಯ ದೊರಕುವಂತೆ ಕ್ರಮ ಕೈಗೊಳ್ಳಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಖೇರ್ಡಾ(ಬಿ) ಗ್ರಾಮಕ್ಕೆ ಭೇಟಿ ನೀಡಿದಾಗ ಈಗಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಮಂದಿರದ ಜಾಗದಲ್ಲಿ ನಿರ್ಮಿಸಲಾಗಿದೆ. ಹಾಗಾಗಿ ಶಾಲೆಗೆ ಹೊಸ ನಿವೇಶನ ಕಲ್ಪಿಸಿಕೊಟ್ಟು ಮಂದಿರ ನಿರ್ಮಿಸಿಕೊಡಬೇಕೆಂದು ಗ್ರಾಮಸ್ಥರು ಶಾಸಕರಿಗೆ ಮನವಿ ಸಲ್ಲಿಸಿದರು. ಗ್ರಾಮದ ಅಭಿವೃದ್ಧಿ ವಿಷಯದಲ್ಲಿ ನಾನು ಸದಾ ಸಿದ್ಧನಿದ್ದು ಅಗತ್ಯ ಕ್ರಮವಹಿಸುವುದಾಗಿ ಶಾಸಕರು ಭರವಸೆ ನೀಡಿದರು.
ಈ ವೇಳೆ ಗ್ರಾಮಗಳಲ್ಲಿನ ಮೂಲಸೌಕರ್ಯ, ಕುಡಿಯುವ ನೀರು, ರಸ್ತೆ, ವಿದ್ಯುತ್, ಕೃಷಿ ಸಮಸ್ಯೆಗಳು ಸೇರಿದಂತೆ ವಿವಿಧ ಬೇಡಿಕೆಗಳು ಹಾಗೂ ಅಭಿವೃದ್ಧಿ ಸಂಬಂಧಿತ ವಿಷಯಗಳ ಕುರಿತು ಗ್ರಾಮಸ್ಥರೊಂದಿಗೆ ಚರ್ಚಿಸಿ, ಹಂತ ಹಂತವಾಗಿ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಭರವಸೆ ನೀಡಿದರು. ಇದೇ ವೇಳೆ ವಿವಿಧೆಡೆ ರಸ್ತೆ, ಕುಡಿಯುವ ನೀರು, ಸಮುದಾಯ ಭವನ ಹಾಗೂ ಮತ್ತಿತರೆ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.
ಈ ಸಂದರ್ಭದಲ್ಲಿ ತಹಸೀಲ್ದಾರರಾದ ಮಹೇಶ ಪಾಟೀಲ, ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಕಿರಣ ಪಾಟೀಲ, ಲೋಕೋಪಯೋಗಿ ಉಲಾಖೆ ಎಇಇ ಪ್ರೇಮಸಾಗರ, ಪಂಚಾಯತ ರಾಜ್ ಎಂಜಿನಿಯರಿಂಗ್ ಇಲಾಖೆ ಎಇಇ ಸುನೀಲ ಚಿಲ್ಲರ್ಗೆ, ಜೆಸ್ಕಾಂ ಎಇಇ ರವಿ ಕಾರಬಾರಿ, ಸಿಡಿಪಿಓ ಇಮಲಪ್ಪ, ಮುಖಂಡರಾದ ಶಿವಾಜಿರಾವ ಪಾಟೀಲ ಮುಂಗನಾಳ, ಶಿವರಾಜ ಅಲ್ಮಾಜೆ, ಸಚಿನ ರಾಠೋಡ, ಯೋಗೇಶ ಪಾಟೀಲ, ಸಚಿನ ಬಿರಾದಾರ, ಅನಿಲ ಬಿರಾದಾರ ಹಾಗೂ ಮತ್ತಿತರರು ಇದ್ದರು.






Any questions related to ರೈತರ ಸಮಸ್ಯೆ ಸರಿಪಡಿಸಿ: ಶಾಸಕ ಪ್ರಭು ಚವ್ಹಾಣ ಸೂಚನೆ?