ಬೀದರ ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ, ಶಿಥಿಲ ಶಾಲಾ ಕಟ್ಟಡ ದುರಸ್ತಿ,
ಬೀದರ.01.ಆಗಸ್ಟ.25:- ಬೀದರ ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ, ಶಿಥಿಲ ಶಾಲಾ ಕಟ್ಟಡ ದುರಸ್ತಿ, ಶಾಲೆ ಮಕ್ಕಳ ಕಳಪೆ ಆಹಾರದ ಬಗ್ಗೆ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ತಿಳಿಸಿದರು.
ಅವರು ಶುಕ್ರವಾರ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಎಸ್‌ಎಸ್‌ಎಲ್‌ಸಿ, ಪಿಯುಸಿ ಫಲಿತಾಂಶ ಸುಧಾರಣೆಗೆ ಕ್ಲಸ್ಟರ್ ರಚನೆಗೆ ಆದೇಶ ಮತ್ತು ಪ್ರಗತಿಯಲ್ಲಿರುವ ಎಲ್ಲ ಕಾಮಗಾರಿಗಳ ಗುಣಮಟ್ಟದ ಖಾತ್ರಿಗೆ ಡಿಸಿ, ಸಿಇಓ, ಎ.ಸಿ., ಎಡಿಸಿಗಳು ಸ್ಥಳ ಪರಿಶೀಲನೆ ನಡೆಸಿ ಪ್ರಮಾಣೀಕರಿಸುವಂತೆ ಸಚಿವರು ಸೂಚನೆ ನೀಡಿದರು.

ಮುಖ್ಯಮಂತ್ರಿಯವರು 2025 ಕೋಟಿ ರೂ. ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ್ದು, ಪ್ರಗತಿಯಲ್ಲಿರುವ ಎಲ್ಲ ಯೋಜನೆಗಳ ಗುಣಮಟ್ಟದ ಬಗ್ಗೆ ನಿಗಾ ಇಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದರು.
ಬೀದರ್ ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿ.ಯು.ಸಿ ಫಲಿತಾಂಶ ಕುಸಿಯುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಅವರು, ಜಿಲ್ಲೆಯಲ್ಲಿ ಕ್ಲಸ್ಟರ್ ರಚಿಸಿ ಇಂಗ್ಲಿಷ್, ಗಣಿತ, ವಿಜ್ಞಾನ, ಸಮಾಜಶಾಸ್ತ್ರ ವಿಷಯದ ತಜ್ಞ ಬೋಧಕರಿಂದ ಪರೀಕ್ಷೆಗೆ ಸಿದ್ಧತೆ ಮಾಡಿಸಿ ಫಲಿತಾಂಶ ಹೆಚ್ಚಿಸಲು ಕ್ರಮ ವಹಿಸುವಂತೆ ತಿಳಿಸಿದರು.

ಜಿಲ್ಲಾ ಕೇಂದ್ರ ಮತ್ತು ಎಲ್ಲ ತಾಲೂಕು ಕೇಂದ್ರದಲ್ಲಿ ವಿವಿಧ ಶಾಲೆಗಳಲ್ಲಿರುವ ಉತ್ತಮ ಶಿಕ್ಷಕರನ್ನು ಗುರುತಿಸಿ, ಅವರಿಂದ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ 2 ತಿಂಗಳ ಪುನರ್ ಮನನ ತರಗತಿ ನಡೆಸುವ ಸಾಧ್ಯತೆ ಪರಿಶೀಲಿಸುವಂತೆಯೂ ಸೂಚಿಸಿದರು.
ಶಿಥಿಲ ಕಟ್ಟಡ ಪಟ್ಟಿ ಕೇಳಿದ ಸಚಿವರು: ಬೀದರ್ ಜಿಲ್ಲೆಯಲ್ಲಿ ಹಲವು ಶಾಲೆಗಳ ಕಟ್ಟಡಗಳು ಶಿಥಿಲಾವಸ್ಥೆಯಲ್ಲಿದ್ದು, ವಿದ್ಯಾರ್ಥಿಗಳು ಜೀವ ಭಯದಿಂದ ಪಾಠ ಕಲಿಯುವ ಸ್ಥಿತಿ ನಿರ್ಮಾಣವಾಗಿದೆ ಎಂಬ ದೂರುಗಳ ಬಗ್ಗೆ ಪ್ರಸ್ತಾಪಿಸಿದ ಸಚಿವರು, ಜಿಲ್ಲೆಯಲ್ಲಿ ಎಷ್ಟು ಸರ್ಕಾರಿ ಶಾಲಾ-ಕಾಲೇಜು ಕಟ್ಟಡಗಳು ಶಿಥಿಲಾವಸ್ಥೆಯಲ್ಲಿವೆ ಎಂಬ ಪಟ್ಟಿ ನೀಡುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಕೇಳಿದರು. ಯಾವ ಶಾಲೆಯ ಕೊಠಡಿ ಶಿಥಿಲವಾಗಿದೆ, ಅದನ್ನು ದುರಸ್ತಿ ಮಾಡಬಹುದೇ ಅಥವಾ ಒಡೆದು ಕಟ್ಟಬೇಕೆ ಎಂಬ ಬಗ್ಗೆ ನಿಗದಿತ ಕಾಲಮಿತಿಯಲ್ಲಿ ಸ್ಪಷ್ಟ ಮಾಹಿತಿಯನ್ನು ಕಡತದಲ್ಲಿ ಸಲ್ಲಿಸುವಂತೆ ಆದೇಶ ನೀಡಿದರು.
ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳನ್ನು ಯಾವ ವರ್ಷ ಕಟ್ಟಲಾಗಿದೆ, ಅದಕ್ಕೆ ಮಾಡಿರುವ ವೆಚ್ಚ ಎಷ್ಟು, ಇಷ್ಟು ಬೇಗ ಶಿಥಿಲಾವಸ್ಥೆಗೆ ಹೋಗಲು ಕಾರಣವೇನು ಎಂಬ ಬಗ್ಗೆ ಪರಿಶೀಲನಾ ವರದಿಯನ್ನು ಮುಂದಿನ ಕೆಡಿಪಿ ಸಭೆಯಲ್ಲಿ ಸಲ್ಲಿಸುವಂತೆಯೂ ಸೂಚಿಸಿದರು.
ಶಾಂತಿ-ಸುವ್ಯವಸ್ಥೆ ಕಾಪಾಡಲು ಸೂಚನೆ: ಅಪ್ರಾಪ್ತ ವಯಸ್ಕ ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣದ ಬಗ್ಗೆ ಆಘಾತ ವ್ಯಕ್ತಪಡಿಸಿದ ಸಚಿವರು, ಬಾಲಕಿಯರ ಮತ್ತು ಮಹಿಳಾ ದೌರ್ಜನ್ಯ ಪ್ರಕರಣಗಳಲ್ಲಿ ತನಿಖೆ ತ್ವರಿತಗೊಳಿಸಲು ಡಿವೈಎಸ್.ಪಿ.ಗಳಿಗೆ ಸೂಚನೆ ನೀಡಿದರು.
ಮಹಿಳಾ ದೌರ್ಜನ್ಯ ನಡೆದ ಸಾರ್ವಜನಿಕ ಸ್ಥಳಗಳಲ್ಲಿ ಸಿಸಿ ಟಿವಿ ಕ್ಯಾಮರಾ ಇತ್ತೆ ಎಂದು ಪ್ರಶ್ನಿಸಿದ ಈಶ್ವರ ಖಂಡ್ರೆ ನಗರದ ಆಯಕಟ್ಟಿನ ಸ್ಥಳಗಳಲ್ಲಿ ಸಿಸಿ ಟಿವಿ ಕ್ಯಾಮರಾ ಇಲ್ಲದಿದ್ದರೆ ಅಳವಡಿಸಲು ತುರ್ತು ಕ್ರಮ ಕೈಗೊಳ್ಳಿ ಎಂದು ಸೂಚಿಸಿದರು.
ಅಪರಾಧಿಗಳನ್ನು ಹಿಡಿದು ನ್ಯಾಯಾಲಯದ ಕಟಕಟೆಯಲ್ಲಿ ನಿಲ್ಲಿಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆದರೆ ಮಾತ್ರ ಇಂತಹ ಘಟನೆ ಮರುಕಳಿಸದಂತೆ ತಡೆಯಲು ಸಾಧ್ಯ ಎಂದೂ ಅವರು ಅಭಿಪ್ರಾಯಪಟ್ಟರು.
ಜಿಲ್ಲೆಯಲ್ಲಿ ಮಾನವ ಕಳ್ಳ ಸಾಗಣೆ ಮತ್ತು ಮಾದಕದ್ರವ್ಯ ಜಾಲದ ಬಗ್ಗೆ ನಿಗಾ ಇಡುವಂತೆ ಮತ್ತು ಇಂತಹ ಸಮಾಜಘಾತುಕ ಶಕ್ತಿಗಳ ಹೆಡೆಮುರಿ ಕಟ್ಟಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದರು.
ಕೌಶಲ್ಯ ತರಬೇತಿ: ಇನ್ನು ದೇಶದಾದ್ಯಂತ ಇರುವಂತೆಯೇ ನಮ್ಮ ಜಿಲ್ಲೆಯಲ್ಲಿ ಕೂಡ ನಿರುದ್ಯೋಗ ಸಮಸ್ಯೆ ಇದೆ. ಯುವಕರಿಗೆ ಸ್ವಾವಲಂಬಿಗಳಾಗಿ ಸ್ವಉದ್ಯೋಗ ಕೈಗೊಳ್ಳಲು ಸರ್ಕಾರದ ವಿವಿಧ ಯೋಜನೆ ಅಡಿ ಸಾಲ ಸೌಲಭ್ಯ ಕಲ್ಪಿಸಿ ಉತ್ತೇಜನ ನೀಡಬೇಕು. ಇದರ ಜೊತೆಗೆ ನಮ್ಮ ಜಿಲ್ಲೆಯ ಯುವಕರು ಕೈಗಾರಿಕೆಗಳಲ್ಲಿ ಉದ್ಯೋಗಾವಕಾಶ ಪಡೆಯುವಂತೆ ಅವರಿಗೆ ಕೌಶಲ್ಯ ತರಬೇತಿ ನೀಡಬೇಕು ಎಂದೂ ತಿಳಿಸಿದರು.
ನಮ್ಮ ಜಿಲ್ಲೆಯಲ್ಲಿ ಕೈಗಾರಿಕಾ ಕ್ರಾಂತಿ ಮಾಡಲು ನೈಸರ್ಗಿಕ ಸಂಪನ್ಮೂಲವಿಲ್ಲ. ಹೀಗಾಗಿ ನಮ್ಮ ಯುವಕರಿಗೆ ಸೇವಾ ವಲಯದಲ್ಲಿ ಹೆಚ್ಚು ಹೆಚ್ಚು ಉದ್ಯೋಗ ಲಭಿಸುವಂತೆ ಅಣಿಗೊಳಿಸಲು ಕೌಶಲ್ಯ ತರಬೇತಿ ನೀಡಿ ಎಂದು ಸಲಹೆ ನೀಡಿದರು.
ಜಿಲ್ಲೆಯಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಗುಣಮಟ್ಟವನ್ನು ಖಾತ್ರಿಪಡಿಸಲು, ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕನಿಷ್ಠ ತಲಾ 5 ಕಾಮಗಾರಿಗಳನ್ನು ಯಾಧೃಚ್ಛಿಕವಾಗಿ ಖುದ್ದು ಪರಿಶೀಲಿಸಬೇಕು ಎಂದು ಸೂಚಿಸಿದರು.
ಶಾಸಕ ಶೈಲೇಂದ್ರ ಬೆಲ್ದಾಳೆ ಮಾತನಾಡಿ, ಜಿಲ್ಲೆಯಲ್ಲಿ ಕಲಬೆರಕೆ ಅಡುಗೆ ಎಣ್ಣೆ ಮತ್ತು ಕಳಪೆ ಗುಣಮಟ್ಟದ ಆಹಾರ ಪೂರೈಕೆ ಆಗುತ್ತಿದೆ ಮತ್ತು ಅಧಿಕಾರಿಗಳು ಹೋಟೆಲ್ ಮತ್ತು ರೆಸ್ಟೋರೆಂಟ್ ಗಳಿಗೆ ಭೇಟಿ ನೀಡಿ ಗುಣಮಟ್ಟದ ಪರಿಶೀಲನೆ ಪಡಿಸಬೇಕು ಎಂದು ಸಭೆಗೆ ತಿಳಿಸಿದರು.
ಈ ಸಭೆಯಲ್ಲಿ ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್, ಶಾಸಕರಾದ ಸಿದ್ದಲಿಂಗಪ್ಪ ಪಾಟೀಲ, ಶರಣು ಸಲಗರ, ವಿಧಾನ ಪರಿಷತ್ ಸದಸ್ಯರಾದ ಎಂ.ಜಿ.ಮೂಳೆ, ಭೀಮರಾಯ ಪಾಟೀಲ, ಚಂದ್ರಶೇಖರ ಪಾಟೀಲ, ಮೀನುಗಾರಿಕೆ ನಿಗಮದ ಅಧ್ಯಕ್ಷೆ ಮಾಲಾ.ಬಿ.ನಾರಾಯಣ, ಬೀದರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಸವರಾಜ ಜಾಬಶೆಟ್ಟಿ, ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಅಮರ ಖಂಡ್ರೆ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಮೃತರಾವ ಚಿಮಕೋಡೆ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಗಿರೀಶ್ ಬದೋಲೆ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಂದೀಪ್ ಡಿ, ಜಿಲ್ಲಾ ಉಪ ಸಂರಕ್ಷಣಾಧಿಕಾರಿ ಆಶೀಶ್ ರೆಡ್ಡಿ ಸೇರಿದಂತೆ ಇಲಾಖೆಯ ಉನ್ನತಾಧಿಕಾರಿಗಳು ಉಪಸ್ಥಿತರಿದ್ದರು.