ಬೀದರ.07.ಆಗಸ್ಟ್.25:- ಪ್ರತಿ ವರ್ಷದಂತೆ ಈ ವರ್ಷವು ಆಗಸ್ಟ್.15 ರಂದು ಸ್ವಾತಂತ್ರ್ಯೊತ್ಸವ ದಿನಾಚರಣೆಯನ್ನು ಎಲ್ಲರೂ ಸೇರಿ ಅದ್ದೂರಿಯಾಗಿ ಆಚರಿಸೋಣ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು.
ಅವರು ಗುರುವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಕರೆದ ಸ್ವಾತಂತ್ರ್ಯೋತ್ಸವ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು.
ವಿವಿಧ ಇಲಾಖೆಯ ಅಧಿಕಾರಿಗಳಿಗೆ ವಹಿಸಿದ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಮತ್ತು ತಾವು ತೈಯಾರಿ ಮಾಡಿಕೊಂಡ ಮಾಹಿತಿಯನ್ನು ನೀಡಬೇಕು ಹಾಗೂ ಧ್ವಜಾರೋಹಣ ಸಂದರ್ಭದಲ್ಲಿ ಎಲ್ಲೂ ಧ್ಜಜ ತಲೆ ಕೆಳಗಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಆಗಸ್ಟ್.15 ರಂದು ಬೆಳಿಗ್ಗೆ 8 ಗಂಟೆಗೆ ಎಲ್ಲಾ ಸರಕಾರಿ ಹಾಗೂ ಅರೆ ಸರಕಾರಿ ಕಛೇರಿ ಮತ್ತು ಶಾಲಾ- ಕಾಲೇಜುಗಳಲ್ಲಿ ಧ್ವಜಾರೋಹಣ ನೆರವೇರಿಸಿ ಎಲ್ಲರೂ ಬೀದರ ಜಿಲ್ಲಾ ನೆಹರು ಕ್ರೀಡಾಂಗಣದಲ್ಲಿ 8:45 ಕ್ಕೆ ಬಂದು ಸೇರಬೇಕು 9 ಗಂಟೆಗೆ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಇರುತ್ತದೆ. ಆಗಸ್ಟ್ 14 ಮತ್ತು 15 ರಂದು ಎರಡು ದಿನ ಎಲ್ಲಾ ಸರಕಾರಿ ಕಛೇರಿಗಳ ಮೇಲೆ ದೀಪಾಲಂಕಾರ ಮಾಡಬೇಕೆಂದು ಹೇಳಿದರು.
ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಸಲು ಅದಕ್ಕಾಗಿ ಒಂದು ಸಮಿತಿಯನ್ನು ರಚಿಸಲಾಗಿದೆ. ಲೋಕೋಪಯೋಗಿ ಇಲಾಖೆಯವರು ಜಿಲ್ಲಾ ನೆಹರು ಕ್ರೀಡಾಂಗಣದಲ್ಲಿ ಮಳೆ ನೀರು ನಿಲ್ಲದಂತೆ ಮತ್ತು ವೇದಿಕೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕೆಂದರು. ನಗರಸಭೆ ವತಿಯಿಂದ ಕ್ರೀಡಾಂಗಣದ ಸ್ವಚ್ಚತೆ ಮತ್ತು ಮೂಲಭೂತ ಸೌಕರ್ಯಗಳು ಇರುವಂತೆ ನೋಡಿಕೊಳ್ಳಬೇಕು. ಶಿಕ್ಷಣ ಇಲಾಖೆ ವತಿಯಿಂದ ಪ್ರಬಂಧ ಹಾಗೂ ಭಾಷಣ ಸ್ಪರ್ದೆಗಳನ್ನು ಶಾಲಾ-ಕಾಲೇಜುಗಳಲ್ಲಿ ಏರ್ಪಡಿಸುವುದರ ಜೊತೆಗೆ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಬೇಕೆಂದು ಹೇಳಿದರು.
ಇದೇ ಸಂದರ್ಭದಲ್ಲಿ ಸರಕಾರಿ ಕಾರ್ಯಕ್ರಮಗಳಲ್ಲಿ ಅನುಸರಿಸಬೇಕಾದ ಶಿಷ್ಠಾಚಾರ ಪಾಲನೆ ಕುರಿತು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಸಭೆ ನಡೆಯಿತು.
ಈ ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ, ಬೀದರ ಸಹಾಯಕ ಆಯುಕ್ತ ಎಂ.ಡಿ.ಶಕೀಲ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೆಶಕರಾದ ಚಂದ್ರಕಾಂತ ಶಾಬಾದಕರ್, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ರಾಮ ಸಿಂಧೆ, ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ವಿಜಯಕುಮಾರ ಸೋನಾರೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಸುರೇಶ್ ಚನ್ನಶೆಟ್ಟಿ, ಸೇರಿದಂತೆ ಇತರೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.