ಬೆಂಗಳೂರು.07.ಜುಲೈ.26: ರಾಜ್ಯ ಸರ್ಕಾರ ಉನ್ನತ ಶಿಕ್ಷಣ ಇಲಾಖೆ 2026-27ನೇ ಶೈಕ್ಷಣಿಕ ಈ ಹೊಸ ನಿಯಮಗಳು ಪರಿಚಯಿಸುತ್ತಿದೆ. ಅತಿಥಿ ಉಪನ್ಯಾಸಕರನ್ನು ಹೆಚ್ಚುವರಿ ಕಾರ್ಯಭಾರಕ್ಕೆ ವಿಶ್ವವಿದ್ಯಾಲಯಗಳೇ ನೇಮಿಸಿಕೊಂಡು, ವಿದ್ಯಾರ್ಥಿಗಳಿಂದ ಸಂಗ್ರಹಿಸುವ ಶುಲ್ಕದಿಂದಲೇ ವೇತನ ಪಾವತಿಸುವಂತೆ ಹೊರಡಿಸಿರುವ ಆದೇಶವನ್ನು ಉನ್ನತ ಶಿಕ್ಷಣ ಇಲಾಖೆ ಕೂಡಲೇ ಹಿಂಪಡೆಯಬೇಕು ಎಂದು ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ವಿರೋಧ ಮಾಡಿದ್ದಾರೆ.
ಹಿಂದಿನಂತೆ ಕಾಲೇಜು ಶಿಕ್ಷಣ ಇಲಾಖೆಯ ಮೂಲಕವೇ ಅತಿಥಿ ಉಪನ್ಯಾಸಕರ ನೇಮಕಾತಿ ನಡೆಸಿ, ಅವರ ಸಂಪೂರ್ಣ ವೇತನವನ್ನು ರಾಜ್ಯ ಸರ್ಕಾರವೇ ಭರಿಸಬೇಕು. ಸಚಿವ ಸಂಪುಟದ ಉಪಸಮಿತಿಯ ವರದಿ ಆಧರಿಸಿ ಸರ್ಕಾರ ಕ್ರಮವಹಿಸುವವರೆಗೆ ಯಾವುದೇ ಹೊಸ ಆರ್ಥಿಕ ಹೊಣೆಗಾರಿಕೆಯನ್ನು ವಿಶ್ವವಿದ್ಯಾಲಯಗಳ ಮೇಲೆ ಹೊರಿಸಬಾರದು ಎಂದು ಆಗ್ರಹಿಸಿದ್ದಾರೆ.
ವಿಶ್ವವಿದ್ಯಾಲಯಗಳ ಆರ್ಥಿಕ ಸದೃಢತೆ ಮತ್ತು ಉನ್ನತ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು ಅಗತ್ಯವಿರುವ ಶಾಶ್ವತ ಆರ್ಥಿಕ ಹಾಗೂ ಆಡಳಿತಾತ್ಮಕ ಸುಧಾರಣೆಗಳನ್ನು ಜಾರಿಗೆ ತರಬೇಕು. ವಿಶ್ವವಿದ್ಯಾಲಯಗಳು ಕಾಯಂ ಬೋಧಕರನ್ನು ನೇಮಿಸಿಕೊಳ್ಳುವವರೆಗೂ ಕಾಲೇಜು ಶಿಕ್ಷಣ ಇಲಾಖೆಯಿಂದಲೇ ಅತಿಥಿ ಉಪನ್ಯಾಸಕರನ್ನು ನೇಮಿಸಿ ವೇತನ ಪಾವತಿಸಬೇಕು.
ಸರ್ಕಾರ ನಿಗದಿಪಡಿಸಿರುವ ಗೌರವಧನವನ್ನು ವಿ.ವಿ.ಗಳು ವಿದ್ಯಾರ್ಥಿಗಳ ಶುಲ್ಕದಿಂದ ಭರಿಸುವುದು ಪ್ರಾಯೋಗಿಕವಾಗಿ ಅಸಾಧ್ಯವಾಗಿದೆ. ಇದರಿಂದ ಅತಿಥಿ ಉಪನ್ಯಾಸಕರ ವೇತನ ಕಡಿಮೆಯಾಗುವ ಅಥವಾ ವಿಳಂಬವಾಗುವ ಸಾಧ್ಯತೆ ಹೆಚ್ಚಿದ್ದು, ಅವರ ಜೀವನೋಪಾಯಕ್ಕೆ ತೀವ್ರ ತೊಂದರೆಯಾಗುತ್ತದೆ ಎಂದು ತಿಳಿಸಿದ್ದಾರೆ.
ತರಗತಿಗಳು, ಪರೀಕ್ಷೆಗಳು, ಸಂಶೋಧನೆ ಮತ್ತು ಶೈಕ್ಷಣಿಕ ಚಟುವಟಿಕೆಗಳು ಹಾಗೂ ಗುಣಮಟ್ಟದ ಮೇಲೆ ನೇರ ಪರಿಣಾಮ ಉಂಟಾಗಲಿದ್ದು ಉನ್ನತ ಶಿಕ್ಷಣದ ಗುಣಮಟ್ಟ ಕುಸಿಯುವುದರ ಜೊತೆಗೆ ವಿದ್ಯಾರ್ಥಿಗಳ ಭವಿಷ್ಯಕ್ಕೂ ಧಕ್ಕೆಯಾಗಲಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ವಿಶ್ವವಿದ್ಯಾಲಯಗಳ ಆರ್ಥಿಕ ಬಲವರ್ಧನೆ, ಆಡಳಿತಾತ್ಮಕ ಸುಧಾರಣೆ ಹಾಗೂ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ಈಗಾಗಲೇ ಸಚಿವ ಸಂಪುಟದ ಉಪಸಮಿತಿಯನ್ನು ರಚಿಸಿದ್ದು, ಸದರಿ ಉಪಸಮಿತಿಯ ವರದಿ ಆಧರಿಸಿ ಕ್ರಮವಹಿಸುವ ಮುನ್ನವೇ ವಿಶ್ವವಿದ್ಯಾಲಯಗಳ ಆರ್ಥಿಕ ಹೊಣೆಗಾರಿಕೆಗೆ ಸಂಬಂಧಿಸಿ ಇಂತಹ ಮಹತ್ವದ ನಿರ್ಧಾರವನ್ನು ಕೈಗೊಂಡಿರುವುದು ಆಶ್ಚರ್ಯಕರ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






Any questions related to ಅತಿಥಿ ಉಪನ್ಯಾಸಕರನ್ನು ವಿಶ್ವವಿದ್ಯಾಲಯಗಳೇ ನೇಮಿಸಿಕೊಂಡು, ವಿದ್ಯಾರ್ಥಿಗಳಿಂದ ಸಂಗ್ರಹಿಸುವ ಶುಲ್ಕದಿಂದಲೇ ವೇತನ.?