Home » ಲೈವ್ ನ್ಯೂಸ್ » ಕಾವೇರಿ ನೀರು ಹಂಚಿಕೆ ಬಿಕ್ಕಟ್ಟು, ಮುಂದಿನ ಕಾನೂನು ಹೋರಾಟ.

ಕಾವೇರಿ ನೀರು ಹಂಚಿಕೆ ಬಿಕ್ಕಟ್ಟು, ಮುಂದಿನ ಕಾನೂನು ಹೋರಾಟ.

Facebook
X
WhatsApp
Telegram

ಬೆಂಗಳೂರು.02.ಆಗಸ್ಟ.26: ರಾಜ್ಯ ಸರ್ಕಾರ ಕಾವೇರಿ ನೀರು ಹಂಚಿಕೆ ಸಂಬಂಧಿತ ತಮಿಳುನಾಡು ಸತತವಾಗಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಾಜ್ಯದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.  ಕಾವೇರಿ ನೀರು ಹಂಚಿಕೆ ಬಿಕ್ಕಟ್ಟು ತೀವ್ರಗೊಂಡ ಬೆನ್ನಲ್ಲೇ, ಮುಂದಿನ ಕಾನೂನು ಹೋರಾಟ ಹಾಗೂ ರಾಜಕೀಯ ತಂತ್ರಗಾರಿಕೆ ಕುರಿತು ಚರ್ಚಿಸಲು ರಾಜ್ಯ ಸರ್ಕಾರ ಸರ್ವಪಕ್ಷ ಸಭೆ ಆಹ್ವಾನ ನೀಡಲಾಗಿದೆ.

ಮುಖ್ಯಮಂತ್ರಿ ಅವರ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಈ ಮಹತ್ವದ ಸಭೆ ನಡೆಯಲಿದ್ದು, ಕಾವೇರಿ ಜಲಾನಯನ ಪ್ರದೇಶದ ಶಾಸಕರು, ಸಂಸದರು ಹಾಗೂ ಮಾಜಿ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಲಾಗಿದೆ.

ತಮಿಳುನಾಡಿಗೆ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಆದೇಶಿಸಿರುವುದು ರಾಜ್ಯದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರದ ಮುಂದಿನ ನಡೆ ಏನು ಎಂಬ ಕುತೂಹಲ ಮೂಡಿದೆ.

ಸರ್ವಪಕ್ಷ ಸಭೆಯಲ್ಲಿ ಜಾತ್ಯತೀತ ಜನತಾದಳ (ಜೆಡಿಎಸ್) ಸಕ್ರಿಯವಾಗಿ ಭಾಗವಹಿಸಲಿದ್ದು, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಶಾಸಕ ಸಿ.ಬಿ. ಸುರೇಶ್ ಬಾಬು ಹಾಗೂ ಬೋಜೇಗೌಡ ಅವರು ಸಭೆಗೆ ಆಗಮಿಸಲಿದ್ದಾರೆ.

ರಾಜ್ಯದ ರೈತರ ಹಿತರಕ್ಷಣೆ ಮತ್ತು ಕುಡಿಯುವ ನೀರಿನ ಭದ್ರತೆಯ ದೃಷ್ಟಿಯಿಂದ ತಮ್ಮ ಪಕ್ಷದ ಪ್ರಬಲ ವಾದಗಳನ್ನು ಹಾಗೂ ಮಹತ್ವದ ಸಲಹೆಗಳನ್ನು ಸರ್ಕಾರದ ಮುಂದಿಡುವುದಾಗಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ರಾಜ್ಯದ ಹಿತಕ್ಕಾಗಿ ಎಲ್ಲಾ ಪಕ್ಷಗಳು ಒಗ್ಗಟ್ಟಿನಿಂದ ನಿರ್ಣಯ ಕೈಗೊಳ್ಳಬೇಕು ಎಂಬುದು ಜೆಡಿಎಸ್‌ನ ನಿಲುವಾಗಿದೆ.

ಮತ್ತೊಂದೆಡೆ, ವಿರೋಧ ಪಕ್ಷವಾದ ಭಾರತೀಯ ಜನತಾ ಪಾರ್ಟಿ (BJP) ಈ ಸಭೆಯಲ್ಲಿ ಪಾಲ್ಗೊಳ್ಳುವ ಕುರಿತು ಕೋರ್ ಕಮಿಟಿ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಿದೆ. ಈಗಾಗಲೇ ತಮಿಳುನಾಡಿಗೆ ನೀರು ಹರಿಸಿದ ನಂತರ ಸರ್ವಪಕ್ಷ ಸಭೆ ಕರೆಯುತ್ತಿರುವುದಕ್ಕೆ ಬಿಜೆಪಿ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ನೀರು ಬಿಟ್ಟ ಮೇಲಷ್ಟೇ ಸರ್ಕಾರಕ್ಕೆ ಸರ್ವಪಕ್ಷಗಳ ನೆನಪಾಗುತ್ತದೆಯೇ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಮಾಜಿ ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ್ ಪ್ರಶ್ನಿಸಿದ್ದು, ಸರ್ಕಾರ ತಕ್ಷಣವೇ ನೀರು ಬಿಡುವುದನ್ನು ಸ್ಥಗಿತಗೊಳಿಸಿ ರೈತರ ಪರ ನಿಲ್ಲಬೇಕು ಎಂದು ಆಗ್ರಹಿಸಿದ್ದಾರೆ.

ಈ ನಡುವೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಚುರುಕುಗೊಂಡಿದ್ದು, ಕಬಿನಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಜಲಾಶಯಗಳು ಭರ್ತಿಯಾಗುವ ಹಂತ ತಲುಪಿದಾಗ ಸಹಜವಾಗಿಯೇ ನೀರು ಹರಿಯುತ್ತದೆ ಹೊರತು, ರಾಜ್ಯದ ಹಿತಬಲಿಕೊಟ್ಟು ನೀರು ಹರಿಸುತ್ತಿಲ್ಲ ಎಂದು ಸರ್ಕಾರ ವಿವರಣೆ ನೀಡಿದೆ.

ಪ್ರಾಧಿಕಾರದ ಆದೇಶದ ವಿರುದ್ಧ ಈಗಾಗಲೇ ಮೇಲ್ಮನವಿ ಸಲ್ಲಿಸಲಾಗಿದ್ದು, ಸರ್ವಪಕ್ಷ ಸಭೆಯಲ್ಲಿ ಒಮ್ಮತದ ನಿರ್ಧಾರ ತೆಗೆದುಕೊಂಡು ಒಗ್ಗಟ್ಟಿನಿಂದ ಕಾವೇರಿ ಹೋರಾಟ ಮುಂದುವರಿಸಲು ಸರ್ಕಾರ ಯೋಜನೆ ರೂಪಿಸಿದೆ.

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology