Home » ಲೈವ್ ನ್ಯೂಸ್ » ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ -2026!

ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ -2026!

ಕಲಬುರಗಿ.09.ಸೆಪ್ಟೆಂಬರ್.26:- ಶ್ರೀಮತಿ ವೀರಮ್ಮ ಮಹಿಳಾ ಮಹಾವಿದ್ಯಾಲಯದ ಶಿಕ್ಷಣ ಶಾಸ್ತ್ರ ವಿಭಾಗದ ವತಿಯಿಂದ ಸೆಪ್ಟೆಂಬರ್ 8, 2026ರಂದು “ಜನರು, ಭೂಮಿ ಮತ್ತು ಸಮೃದ್ಧಿಗಾಗಿ ಸಾಕ್ಷರತೆ” ಎಂಬ ಆಶಯದೊಂದಿಗೆ ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.


ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಚಾಂದ್ ಬೀಬಿ ಬಿ.ಎಡ್. ಕಾಲೇಜು, ಕಲಬುರಗಿಯ ಸಹಾಯಕ ಪ್ರಾಧ್ಯಾಪಕರಾದ ಡಾ. ಶರಬಯ್ಯ ಸ್ವಾಮಿ ಅವರು ತಮ್ಮ ಉಪನ್ಯಾಸದಲ್ಲಿ ಮಹಿಳಾ ಶಿಕ್ಷಣದ ಮಹತ್ವವನ್ನು ಒತ್ತಿಹೇಳಿದರು. “ಒಬ್ಬ ಮಹಿಳೆಗೆ ಶಿಕ್ಷಣ ನೀಡಿದರೆ ಇಡೀ ಕುಟುಂಬ ಹಾಗೂ ರಾಷ್ಟ್ರವೇ ಶಿಕ್ಷಣ ಪಡೆದಂತಾಗುತ್ತದೆ” ಎಂಬ ಸಂದೇಶವನ್ನು ನೀಡಿದರು. ಮಹಿಳೆಯರು ಶಿಕ್ಷಣದ ಮೂಲಕ ಜ್ಞಾನವನ್ನು ಪಡೆದು, ಉತ್ತಮ ಮೌಲ್ಯಗಳು, ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಒಂದು ಪೀಳಿಗೆಯಿಂದ ಮತ್ತೊಂದು ಪೀಳಿಗೆಗೆ ವರ್ಗಾಯಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ತಿಳಿಸಿದರು.

ಇಂದಿನ ಯುವಜನರ ಜೀವನದಲ್ಲಿ ಡಿಜಿಟಲ್ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ (AI) ಹಾಗೂ ಸಾಮಾಜಿಕ ಮಾಧ್ಯಮಗಳು ಮಹತ್ವದ ಪ್ರಭಾವ ಬೀರುತ್ತಿವೆ. ಇವುಗಳ ಸದುಪಯೋಗದಿಂದ ಜ್ಞಾನವನ್ನು ವಿಸ್ತರಿಸಿಕೊಳ್ಳಬಹುದು. ಆದರೆ ಅತಿಯಾದ ಹಾಗೂ ದುರುಪಯೋಗವು ಯುವಜನರ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿದೆ. ಆದ್ದರಿಂದ ತಂತ್ರಜ್ಞಾನವನ್ನು ಜವಾಬ್ದಾರಿಯುತವಾಗಿ ಬಳಸಬೇಕು ಎಂದು ಅವರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

“ಭೂಮಿಯನ್ನು ನಾವು ಚೆನ್ನಾಗಿ ನೋಡಿಕೊಂಡರೆ, ಭೂಮಿಯೂ ನಮ್ಮನ್ನು ಚೆನ್ನಾಗಿ ನೋಡಿಕೊಳ್ಳುತ್ತದೆ” ಎಂದು ಪರಿಸರ ಸಂರಕ್ಷಣೆಯ ಮಹತ್ವವನ್ನು ವಿವರಿಸಿದರು. ಪ್ರಕೃತಿಯ ಮೇಲಿನ ಮಾನವನ ಅತಿಯಾದ ಹಸ್ತಕ್ಷೇಪದಿಂದ ಪರಿಸರದಲ್ಲಿ ಅನೇಕ ಬದಲಾವಣೆಗಳು ಉಂಟಾಗುತ್ತಿದ್ದು, ಇತ್ತೀಚಿನ ವರ್ಷಗಳಲ್ಲಿ ಉಷ್ಣತೆಯ ಪ್ರಮಾಣ ಹೆಚ್ಚಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಹೇಳಿದರು. ಮುಂದಿನ ಪೀಳಿಗೆಯ ಭವಿಷ್ಯಕ್ಕಾಗಿ ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದರು.

ಸಮೃದ್ಧ ಜೀವನಕ್ಕೆ ಉತ್ತಮ ಆರೋಗ್ಯ ಅತ್ಯಗತ್ಯ. ಜ್ಞಾನವೇ ಶಕ್ತಿ; ಆದರೆ ಆ ಜ್ಞಾನವನ್ನು ಸರಿಯಾದ ರೀತಿಯಲ್ಲಿ ಬಳಸಿದಾಗ ಮಾತ್ರ ಅದು ವ್ಯಕ್ತಿ ಹಾಗೂ ಸಮಾಜದ ಅಭಿವೃದ್ಧಿಗೆ ಕಾರಣವಾಗುತ್ತದೆ ಎಂದು ಅವರು ತಿಳಿಸಿದರು. ಪ್ಲಾಸ್ಟಿಕ್ ಬಳಕೆಯನ್ನು ಸಾಧ್ಯವಾದಷ್ಟು ಕಡಿಮೆ ಮಾಡಬೇಕು ಮತ್ತು ಪರಿಸರ ಸ್ನೇಹಿ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಸಾಕ್ಷರತೆಯ ಮಹತ್ವವನ್ನು ವಿವರಿಸುತ್ತಾ, “ದೀಪವು ಮನೆಯೊಳಗೆ ಬೆಳಕು ನೀಡಿ ಎಲ್ಲೆಡೆ ಪ್ರಕಾಶವನ್ನು ಹರಡುವಂತೆ, ಸಾಕ್ಷರತೆಯೂ ಸಮಾಜದ ಪ್ರತಿಯೊಂದು ಹಂತದಲ್ಲೂ ಜ್ಞಾನದ ಬೆಳಕನ್ನು ಹರಡಬೇಕು” ಎಂದು ಅವರು ಹೇಳಿದರು. “ಸಾಕ್ಷರ ಸಮಾಜವೇ ಶಕ್ತಿಶಾಲಿ ಸಮಾಜ” ಎಂಬ ಸಂದೇಶವನ್ನು ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಜೇಂದ್ರ ಕೊಂಡಾ ವಹಿಸಿದ್ದರು. ಕಾರ್ಯಕ್ರಮದಲ್ಲಿ ಅತಿಥಿಗಳ ಪರಿಚಯವನ್ನು ಶಿಕ್ಷಣ ವಿಭಾಗದ ಮುಖ್ಯಸ್ಥರಾದ ಡಾ. ನಾಗರತ್ನ ಎಸ್ ಅವರು ನೆರವೇರಿಸಿದರು. ಕುಮಾರಿ ಐಶ್ವರ್ಯ ಕಾರ್ಯಕ್ರಮವನ್ನು ನಿರೂಪಿಸಿದರು. ಕುಮಾರಿ ಸ್ವಾತಿ ಸ್ವಾಗತ ಭಾಷಣ ಮಾಡಿದರು ಹಾಗೂ ಕುಮಾರಿ ರಾಧಿಕಾ ವಂದನಾರ್ಪಣೆ ಮಾಡಿದರು.


ಈ ಕಾರ್ಯಕ್ರಮದಲ್ಲಿ ಡಾ. ಶ್ರೀದೇವಿ ಸರಡಗಿ,ಶ್ರೀಮತಿ ಶಿವಲೀಲಾ ಧೋತ್ರ, ಶ್ರೀಮತಿ ಶ್ವೇತಾ ಕೋಟೆ, ಶ್ರೀಮತಿ ಗೀತಾ ಪಾಟೀಲ್ ಹಾಗೂ ಇತರ ವಿಭಾಗದ ಪ್ರಾಧ್ಯಾಪಕರು ಹಾಗೂ 76 ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಲ್ಲಿ ಸಾಕ್ಷರತೆಯ ಮಹತ್ವ, ಸೃಜನಶೀಲತೆ ಹಾಗೂ ಅಭಿವ್ಯಕ್ತಿ ಸಾಮರ್ಥ್ಯವನ್ನು ಬೆಳೆಸುವ ಉದ್ದೇಶದಿಂದ ಭಾಷಣ ಸ್ಪರ್ಧೆ ಮತ್ತು ಚಿತ್ರಕಲೆ ಸ್ಪರ್ಧೆಗಳನ್ನು ಸಹ ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಕಾರ್ಯಕ್ರಮದ ಸಂದರ್ಭದಲ್ಲಿ ಬಹುಮಾನಗಳನ್ನು ವಿತರಿಸಿ ಪ್ರೋತ್ಸಾಹಿಸಲಾಯಿತು.


ಸಾಕ್ಷರತೆಯ ಮಹತ್ವ, ಮಹಿಳಾ ಶಿಕ್ಷಣ, ಪರಿಸರ ಸಂರಕ್ಷಣೆ, ಆರೋಗ್ಯ, ತಂತ್ರಜ್ಞಾನದ ಜವಾಬ್ದಾರಿಯುತ ಬಳಕೆ ಹಾಗೂ ಉತ್ತಮ ನಾಗರಿಕತ್ವದ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವಲ್ಲಿ ಕಾರ್ಯಕ್ರಮವು ಯಶಸ್ವಿಯಾಯಿತು ಎಂದು ಮಹಾವಿದ್ಯಾಲಯದ ನ್ಯಾಕ್ ಸಂಯೋಜಕರಾದ ಡಾ. ಮೋಹನರಾಜ ಪತ್ತಾರ ಅವರು ಪತ್ರಿಕಾ ಪ್ರಕಟಣೆಗಾಗಿ ತಿಳಿಸಿದ್ದಾರೆ.

Author

ಪ್ರಮುಖ ಸುದ್ದಿ

Stock market

Astrology