Home » ಲೈವ್ ನ್ಯೂಸ್ » ಬಿಜೆಪಿ-ಜೆಡಿಎಸ್ ಪ್ರತಿಭಟನೆ ನಡುವೆ ಮಹತ್ವದ ನಿರ್ಧಾರ: ನಾಗೇಂದ್ರ ಹೆಗಲಿಗೆ ಮತ್ತೊಂದು ಖಾತೆ

ಬಿಜೆಪಿ-ಜೆಡಿಎಸ್ ಪ್ರತಿಭಟನೆ ನಡುವೆ ಮಹತ್ವದ ನಿರ್ಧಾರ: ನಾಗೇಂದ್ರ ಹೆಗಲಿಗೆ ಮತ್ತೊಂದು ಖಾತೆ

Facebook
X
WhatsApp
Telegram

ಬೆಂಗಳೂರು22.ಆಗಸ್ಟ್.26: ರಾಜ್ಯ ಸಚಿವ ಬಿ. ನಾಗೇಂದ್ರ ಅವರ ವಿರುದ್ಧ ಬಿಜೆಪಿ ಪ್ರತಿಪಕ್ಷಗಳ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ, ರಾಜ್ಯ ಸರ್ಕಾರವು ಅವರಿಗೆ ಮತ್ತೊಂದು ಪ್ರಮುಖ ಜವಾಬ್ದಾರಿಯನ್ನು ನೀಡಿದೆ. ಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಜವಾಬ್ದಾರಿ ಹೊಂದಿರುವ ನಾಗೇಂದ್ರ ವಿರುದ್ಧ ಪ್ರತಿಪಕ್ಷಗಳ ಪ್ರತಿಭಟನೆ ನಡೆಸ್ತಿದ್ದಾರೆ.

ವಿಧಾನ ಪರಿಷತ್‌ನಲ್ಲಿ ಬಿಜೆಪಿ ಸದಸ್ಯ ಶಶೀಲ್ ನಮೋಶಿ ಅವರು ಕೇಳಿದ್ದ ಪ್ರಶ್ನೆಗೆ ಸಚಿವ ನಾಗೇಂದ್ರ ನೀಡಿರುವ ಲಿಖಿತ ಉತ್ತರದಲ್ಲಿ ಈ ಮಾಹಿತಿ ಬಹಿರಂಗವಾಗಿದೆ. 2025ರಲ್ಲಿ ಪ್ರತ್ಯೇಕವಾಗಿ ರಚಿಸಲಾದ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಸಚಿವಾಲಯದ ಆಡಳಿತಾತ್ಮಕ ಹೊಣೆ ಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸಚಿವರಿಗೆ ಇರಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.


KKRDB ಕೂಡ ಇದೇ ಸಚಿವಾಲಯದ ವ್ಯಾಪ್ತಿಯಲ್ಲಿ

ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಗೆ ಸಂಬಂಧಿಸಿದ ಪ್ರಮುಖ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿರುವ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (KKRDB) ಕೂಡ ಇದೇ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸಲಿದೆ. ಸಚಿವಾಲಯದ ಕಾರ್ಯನಿರ್ವಹಣೆಗೆ ಅಗತ್ಯವಾದ ಸಿಬ್ಬಂದಿ ವ್ಯವಸ್ಥೆ ಮಾಡಲಾಗಿದ್ದು, ಒಟ್ಟು 16 ಹುದ್ದೆಗಳನ್ನು ಮೀಸಲಿಡಲಾಗಿದೆ ಎಂದು ನಾಗೇಂದ್ರ ತಮ್ಮ ಉತ್ತರದಲ್ಲಿ ತಿಳಿಸಿದ್ದಾರೆ.

ಕಲ್ಯಾಣ ಕರ್ನಾಟಕ ಪ್ರದೇಶವು ಬೀದರ್, ಬಳ್ಳಾರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಹಾಗೂ ವಿಜಯನಗರ ಜಿಲ್ಲೆಗಳನ್ನು ಒಳಗೊಂಡಿದೆ. ಈ ಭಾಗದಲ್ಲಿ ಶಿಕ್ಷಣ, ಆರೋಗ್ಯ, ನೀರಾವರಿ, ಕುಡಿಯುವ ನೀರು, ರಸ್ತೆ ಸಂಪರ್ಕ, ಕೃಷಿ, ಕೈಗಾರಿಕೆ ಹಾಗೂ ಉದ್ಯೋಗ ಸೇರಿದಂತೆ ಹಲವು ಕ್ಷೇತ್ರಗಳಲ್ಲಿನ ಅಭಿವೃದ್ಧಿ ಅಂತರವನ್ನು ಕಡಿಮೆ ಮಾಡುವ ಉದ್ದೇಶದಿಂದ KKRDB ಕಾರ್ಯನಿರ್ವಹಿಸುತ್ತಿದೆ.

ನಾಗೇಂದ್ರ ವಿರುದ್ಧ ಪ್ರತಿಪಕ್ಷಗಳ ಸಮರ

ಇತ್ತ ಸಚಿವ ನಾಗೇಂದ್ರ ಅವರ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ನಡೆಸುತ್ತಿರುವ ಪ್ರತಿಭಟನೆ ಮತ್ತಷ್ಟು ತೀವ್ರಗೊಂಡಿದೆ. ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮಕ್ಕೆ ಸಂಬಂಧಿಸಿದ ಅಕ್ರಮಗಳ ಆರೋಪವನ್ನು ಮುಂದಿಟ್ಟುಕೊಂಡು ಪ್ರತಿಪಕ್ಷಗಳು ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸುತ್ತಿವೆ.

ಇಂದು ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಕಪ್ಪು ಟೀ-ಶರ್ಟ್ ಧರಿಸಿ ಪ್ರತಿಭಟನೆ ನಡೆಸಿದ್ದು, ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಘೋಷಣೆಗಳನ್ನು ಕೂಗಿದರು. ಸದನಕ್ಕೆ ಕಪ್ಪು ಟೀ-ಶರ್ಟ್ ಧರಿಸಿ ಆಗಮಿಸಿದ ಪ್ರತಿಪಕ್ಷ ಸದಸ್ಯರನ್ನು ಮಾರ್ಷಲ್‌ಗಳು ತಡೆಯಲು ಮುಂದಾದ ಸಂದರ್ಭದಲ್ಲೂ ಜಟಾಪಟಿ ನಡೆದಿತ್ತು.

ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ

ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, ನಾಗೇಂದ್ರ ಅವರನ್ನು ಸಚಿವ ಸ್ಥಾನದಿಂದ ಕೆಳಗಿಳಿಸಬೇಕು ಎಂದು ಬಿಜೆಪಿ-ಜೆಡಿಎಸ್ ಸದಸ್ಯರು ಒತ್ತಾಯಿಸಿದರು. ಕಳೆದ ಹಲವು ದಿನಗಳಿಂದ ಸದನದಲ್ಲಿ ಇದೇ ವಿಚಾರವನ್ನು ಮುಂದಿಟ್ಟುಕೊಂಡು ಹೋರಾಟ ನಡೆಸುತ್ತಿರುವ ಪ್ರತಿಪಕ್ಷಗಳು, ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ಮುಂದುವರಿಸಿವೆ. ನಾಗೇಂದ್ರ ಅವರ ಬದಲಿಗೆ ಕಾಂಗ್ರೆಸ್‌ನ ಮತ್ತೊಬ್ಬ ದಲಿತ ಶಾಸಕರಿಗೆ ಸಚಿವ ಸ್ಥಾನ ನೀಡಬೇಕು ಎಂಬ ಬೇಡಿಕೆಯನ್ನೂ ಆರ್. ಅಶೋಕ್ ಮುಂದಿಟ್ಟಿದ್ದಾರೆ.

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology